ಮಂಗಳೂರಿನಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿದ್ದ ಖಾಸಗಿ ಕ್ಲಿನಿಕ್, ಲ್ಯಾಬ್‌ಗಳಿಗೆ ದಾಳಿ ನಡೆಸಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಅವುಗಳನ್ನು ಮುಚ್ಚಿಸಿ, ಬೀಗ ಜಡಿದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆ.ಪಿ.ಎಂ.ಇ.ಎ ಕಾಯ್ದೆ-2017ರ ಅಡಿಯಲ್ಲಿ ಖಾಸಗಿ ಸಂಸ್ಥೆ, ಕ್ಲಿನಿಕ್‍ಗಳು, ಲ್ಯಾಬೋರೇಟರಿಗಳು ನೋಂದಾವಣೆಯಾಗದೆ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಪತ್ತೆ ಹಚ್ಚಲು ದಾಳಿ ನಡೆಸುತ್ತಿದ್ದಾರೆ.
ಮಂಗಳೂರು ತಾಲೂಕಿನ ಮೂಡುಶೆಡ್ಡೆ- ವಾಮಂಜೂರು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಕ್ಲಿನಿಕ್ ಹಾಗೂ ಲ್ಯಾಬೋರೇಟರಿ ಹಾಗೂ ನಗರದ ಹಂಪನಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಕ್ಲಿನಿಕ್‍ಗೆ ಬೀಗಮುದ್ರೆ ಹಾಕಿದ್ದಾರೆ.
ಕೆ.ಪಿ.ಎಂ.ಇ.ಎ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳದ ಕ್ಲಿನಿಕ್ ಹಾಗೂ ಲ್ಯಾಬ್‌ಗಳು ಹಾಗೂ ಈಗಾಗಲೇ ನೋಂದಾವಣೆಯಾಗಿ ನವೀಕರಣ ಮಾಡಲು ಬಾಕಿ ಇರುವ ಸಂಸ್ಥೆಗಳು ಕಡ್ಡಾಯವಾಗಿ ಒಂದು ವಾರದೊಳಗೆ ನೋಂದಾವಣೆ ಮಾಡಲು ಕಾಲಾವಕಾಶವನ್ನು ನೀಡಲಾಗಿದೆ.
ಈ ಅವಧಿಯೊಳಗೆ ನೋಂದಾವಣೆ ಮಾಡದಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕೆ.ಪಿ.ಎಂ.ಇ ಕಾಯ್ದೆಯಡಿಯಲ್ಲಿ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಎಚ್ಚರಿಸಿದ್ದಾರೆ.