ಮುಂಡಗೋಡ: ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಬೇಕು. ಆ ನಿಟ್ಟಿನಲ್ಲಿ ಸಾಮಾಜಿಕ ಪರಿಶೋಧನಾ ತಂಡದ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ನಿರ್ದೇಶಕ ಸಿ.ಕೆ. ಮಲ್ಲಪ್ಪ ಅವರು ಹೇಳಿದರು.
ತಾಲ್ಲೂಕಿನ ಕಾತೂರು ಗ್ರಾಮ ಪಂಚಾಯತಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಸಾಮಾಜಿಕ ಪರಿಶೋಧನಾ ಕಾರ್ಯದ ಪರಿಶೀಲನೆ ಹಾಗೂ ಜಿಲ್ಲೆಯ ವಿವಿಧ ತಾಲ್ಲೂಕುಗಳ ಸಂಪನ್ಮೂಲ ವ್ಯಕ್ತಿಗಳು ಮತ್ತು ಗ್ರಾಮ ಸಂಪನ್ಮೂಲ ವ್ಯಕ್ತಿಗಳ ಸಾಮಾಜಿಕ ಪರಿಶೋಧನಾ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ), 15ನೇ ಹಣಕಾಸು ಯೋಜನೆ ಸೇರಿದಂತೆ ಕೇಂದ್ರ ಪುರಸ್ಕೃತ ವಿವಿಧ ಯೋಜನೆಗಳ ಪ್ರಮುಖ ಕಡತಗಳು ಮತ್ತು ದಾಖಲೆಗಳನ್ನು ನಿರ್ದೇಶಕರು ಪರಿಶೀಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ಸಂಪನ್ಮೂಲ ವ್ಯಕ್ತಿಗಳ ಕಾರ್ಯಪ್ರಗತಿಯನ್ನು ಅವಲೋಕಿಸಿದ ಅವರು, ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು, ಕಾಮಗಾರಿಗಳ ಗುಣಮಟ್ಟ ಪರಿಶೀಲನೆ, ದಾಖಲೆಗಳ ಸಮರ್ಪಕ ತಪಾಸಣೆ, ವಿಶೇಷ ಗ್ರಾಮಸಭೆಗಳ ಆಯೋಜನೆ ಹಾಗೂ ಸಾರ್ವಜನಿಕರ ಸಹಭಾಗಿತ್ವದ ಮಹತ್ವವನ್ನು ಒತ್ತಿಹೇಳಿದರು.
ಈ ಸುದ್ದಿ ಓದಿದ್ದೀರಾ? ಭಟ್ಕಳ | ಈದ್ಗಾ ಮೈದಾನದ ಬದಲು ಮಸೀದಿಗಳಲ್ಲೇ ಬಕ್ರೀದ್ ನಮಾಜ್‌ಗೆ ಮುಸ್ಲಿಂ ಸಮುದಾಯ ನಿರ್ಧಾರ
ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಕುರಿತು ಅರಿವು ಮೂಡಿಸುವುದು ಹಾಗೂ ವಸೂಲಾತಿ ಸೇರಿದಂತೆ ವಿವಿಧ ಪ್ರಕ್ರಿಯೆಗಳಲ್ಲಿ ಸಂಪನ್ಮೂಲ ವ್ಯಕ್ತಿಗಳು ಅನುಸರಿಸಬೇಕಾದ ಕ್ರಮಗಳ ಕುರಿತು ಅಗತ್ಯ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು.
ಸಭೆಯ ಬಳಿಕ ಕಾತೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಬಸನಕಟ್ಟೆ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ನಿರ್ದೇಶಕರು ಭೇಟಿ ನೀಡಿ. ಅಲ್ಲಿನ ತಾಂತ್ರಿಕ ಸಂಯೋಜಕರು ಹಾಗೂ ತಾಂತ್ರಿಕ ಸಹಾಯಕರೊಂದಿಗೆ ಕಾಮಗಾರಿ ನಿರ್ವಹಣೆ ಕುರಿತು ಸಮಾಲೋಚನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.
ಇದೇ ವೇಳೆ ಸ್ಥಳದಲ್ಲಿದ್ದ ಕೂಲಿಕಾರರೊಂದಿಗೆ ಮಾತನಾಡಿ, ಅವರ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕೇಳಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ವಾಯ್. ದಾಸನಕೊಪ್ಪ, ಗ್ರಾಮೀಣ ಉದ್ಯೋಗ ಯೋಜನೆಯ ಸಹಾಯಕ ನಿರ್ದೇಶಕ ಸೋಮಲಿಂಗಪ್ಪ ಛಬ್ಬಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಅಭಿಯಂತರ ದೀಪಾ ಎಸ್. ಶೆಡಗೇರಿ, ಹಾಗೂ ವಿವಿಧ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.




