ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಮೀರ್ ಅಹ್ಮದ್ ನಜೀರ್ ಅಹ್ಮದ್ ದರ್ಗಾವಾಲೆ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 11 ಆರೋಪಿಗಳನ್ನು ಬಂಧಿಸಿದ್ದು, ಅವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯಿದೆ (KCOCA), 2000ರ ಕಲಂ 3ನ್ನು ಅಳವಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ. 90/2026ರ ಅಡಿಯಲ್ಲಿ ಬಿ.ಎನ್.ಎಸ್.-2023ರ ಕಲಂ 103(1) ಸಹಿತ 3(5)ರಡಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಖಾರದ ಪುಡಿ ಎರಚಿ, ಹರಿತವಾದ ಆಯುಧಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಶಿರಸಿ | ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ನಡೆದ ಸ್ಥಳದ ‘ಶುದ್ಧೀಕರಣ’ ಖಂಡನೀಯ: ಪ್ರಸನ್ನ ಶೆಟ್ಟಿ
ಆರೋಪಿಗಳನ್ನು ಪತ್ತೆಹಚ್ಚಲು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ನಾಲ್ಕು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ತನಿಖೆ ತೀವ್ರಗೊಳಿಸಲಾಗಿತ್ತು. ಖಚಿತ ಮಾಹಿತಿ ಹಾಗೂ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ 11 ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಮಂಜುನಾಥ ನಾಗೇಂದ್ರ ಕಾಜಗಾರ, ಶ್ರೀಕಾಂತ ರಾಜಶೇಖರ ಕಿರಣ್ಣನವರ, ಮಂಜುನಾಥ ವಿಷ್ಣು ಬೆಳಗಾಂವ, ಅಭಿಷೇಕ ಮಲ್ಲಿಕಾರ್ಜುನ ಬಡತಶೆಟ್ಟಿ ಸೇರಿದಂತೆ ವಿವಿಧ ಸ್ಥಳಗಳ ಆರೋಪಿಗಳು ಇದ್ದಾರೆ.
ಬಂಧಿತರಿಂದ ಮೂರು ಪಿಸ್ತೂಲ್‌ಗಳು, ಕೃತ್ಯಕ್ಕೆ ಬಳಸಿದ ವಾಹನಗಳು ಹಾಗೂ ಇತರ ಪ್ರಮುಖ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳ ಕ್ರಿಮಿನಲ್ ಹಿನ್ನೆಲೆಯನ್ನು ಪರಿಶೀಲಿಸಿದಾಗ ರಾಜ್ಯದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕೊಲೆ, ಕೊಲೆ ಯತ್ನ, ಡಕಾಯಿತಿ, ಸುಲಿಗೆ ಹಾಗೂ ರೌಡಿಸಂ ಸೇರಿದಂತೆ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಮುಖ ಆರೋಪಿ ಮಂಜುನಾಥ ಕಾಜಗಾರ ಅಪರಾಧಿಕ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಒಳಗೊಂಡ ಸಂಘಟಿತ ಗುಂಪನ್ನು ರಚಿಸಿಕೊಂಡು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ ಎಂಬುದು ತನಿಖೆಯಿಂದ ತಿಳಿದುಬಂದ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ KCOCA ಕಾಯ್ದೆ ಜಾರಿಗೊಳಿಸಲು ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಿಂದ ಅನುಮೋದನೆ ಪಡೆಯಲಾಗಿದೆ.
ಉಳಿದ ಆರೋಪಿಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ KCOCA ನ್ಯಾಯಾಲಯ, ಬೆಳಗಾವಿ ಇವರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದಂತೆ ಮುಂದಿನ ತನಿಖೆ ಮುಂದುವರಿದಿದೆ. ಪ್ರಕರಣದ ತನಿಖೆಯನ್ನು ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ನಡೆಸಲಾಗುತ್ತಿದೆ.
ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಸಂಘಟಿತ ಅಪರಾಧ ಚಟುವಟಿಕೆಗಳನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಸುರಕ್ಷತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಈ ಮೂಲಕ ಎಚ್ಚರಿಸಿದ್ದಾರೆ.




