ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಜ್ಜಿಗೆರಿ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದಿಂದ ಸಾರ್ವಜನಿಕರು ಮತ್ತು ಶಾಲಾ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಈ ಅಕ್ರಮ ಚಟುವಟಿಕೆಯನ್ನು ನಿಲ್ಲಿಸಬೇಕೆಂದು ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಮಜ್ಜಿಗೆರಿ ಕ್ರಾಸ್ ಬಳಿ ಹುಬ್ಬಳ್ಳಿ-ಶಿರಸಿ ರಸ್ತೆಯ ಪಕ್ಕದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಮದ್ಯದ ಅಂಗಡಿಯು ಅಯ್ಯಪ್ಪಸ್ವಾಮಿ ದೇವಸ್ಥಾನದ ಸಮೀಪವೇ ಇದ್ದು, ಅಲ್ಲೇ ಮಜ್ಜಿಗೆರಿ ಕ್ರಾಸ್ ಬಸ್ ನಿಲ್ದಾಣವೂ ಇರುವುದರಿಂದ ಪ್ರತಿನಿತ್ಯ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಲ್ಲಿ ಬಸ್‌ಗಾಗಿ ಕಾಯುತ್ತಿರುತ್ತಾರೆ.
ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜೇನುನೊಣ ದಾಳಿಗಿಂತ ಭಯಾನಕ ಅವ್ಯವಸ್ಥೆ: ಮೊರಾರ್ಜಿ ವಸತಿ ಶಾಲೆ ವಿರುದ್ಧ ಗಂಭೀರ ಆರೋಪ
ಮದ್ಯಪಾನ ಮಾಡಿದವರು ಅಲ್ಲಿಯೇ ಕುಳಿತು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಅಸಭ್ಯವಾಗಿ ವರ್ತಿಸುವುದು ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಮದ್ಯಪಾನಿಗಳ ಹಾವಳಿಯಿಂದಾಗಿ ಗ್ರಾಮದಲ್ಲಿ ದಿನನಿತ್ಯ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿವೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗುತ್ತಿದ್ದು, ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಈ ರಸ್ತೆಯಲ್ಲಿ ಓಡಾಡಲು ಭಯದ ವಾತಾವರಣ ನಿರ್ಮಾಣವಾಗಿದೆ ಆದ್ದರಿಂದ ಇಂತಹ ಅಂಗಡಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಈ ಸಂಬಂಧ ಈ ಹಿಂದೆಯೂ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಈ ಅಕ್ರಮ ಮದ್ಯ ಮಾರಾಟವನ್ನು ಶಾಶ್ವತವಾಗಿ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.





