ಮುಂಡಗೋಡ ತಾಲೂಕಿನ ಸಿಂಗ್ನಹಳ್ಳಿ ಗ್ರಾಮದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 65 ವರ್ಷದ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ ಸಂತ್ರಸ್ತ ಬಾಲಕಿಗೆ ನ್ಯಾಯ ಒದಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಈ ಕುರಿತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಾರ್ವಜನಿಕ ಮನವಿ ಸಲ್ಲಿಸಿರುವ ಅವರು, ಆರೋಪಿಯ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ನಾಳೆ ಮುಂಡಗೋಡ ಬಂದ್‌ಗೆ ಹಿಂದೂ ಪರ ಸಂಘಟನೆಗಳ ಕರೆ
ಇತ್ತೀಚಿನ ದಿನಗಳಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಘಟನೆಗಳನ್ನು ಖಂಡಿಸಿರುವ ಸಾರ್ವಜನಿಕರು, ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಸಂತ್ರಸ್ತ ಬಾಲಕಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಹಾಗೂ ಮಾನಸಿಕ ಧೈರ್ಯ ತುಂಬಲು ಆಪ್ತ ಸಮಾಲೋಚನೆ ಒದಗಿಸಬೇಕು. ಆಕೆಯ ವಿದ್ಯಾಭ್ಯಾಸವನ್ನು ಸರ್ಕಾರ ಉಚಿತವಾಗಿ ಮುಂದುವರಿಸಲು ವ್ಯವಸ್ಥೆ ಮಾಡಬೇಕು. ಅಲ್ಲದೆ, ಬಾಲಕಿಯ ಕುಟುಂಬಕ್ಕೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಕರಣದ ಆರೋಪಿಗೆ ಜಾಮೀನು ಸಿಗದಂತೆ ಕಾನೂನಿನ ವ್ಯಾಪ್ತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಘಟನೆ ಕೇವಲ ಒಂದು ಕುಟುಂಬಕ್ಕೆ ಸಂಬಂಧಿಸಿದ ವಿಚಾರವಲ್ಲ. ಇಡೀ ಸಮಾಜದ ಹಿತದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಬಾಲಕಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಾರ್ವಜನಿಕರು ಪೊಲೀಸ್ ಇಲಾಖೆ ಮತ್ತು ಸರ್ಕಾರವನ್ನು ಒತ್ತಾಯಿಸಿದ್ದಾರೆ.





