ಮೈಸೂರು ಜಿಲ್ಲೆಯ ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ‘ಕುಂಭಮೇಳ-2025’ನ್ನು
ಫೆಬ್ರವರಿ 10ರಿಂದ 12ರವರೆಗೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಬರುವವರಿಗೆಲ್ಲ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸೂಚನೆ ನೀಡಿದ್ದಾರೆ.
ಕುಂಭ ಮೇಳ-2025ರ ಸಂಬಂಧ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, “ಮೊದಲಿಗೆ 1989ರಲ್ಲಿ ಆರಂಭಗೊಂಡು, ಪ್ರತಿ ಮೂರು ವರ್ಷಗಳಿಗೊಮ್ಮೆ ಕುಂಭಮೇಳ ಆಚರಿಸಿಕೊಂಡು ಬರಲಾಗುತ್ತಿದೆ.
2019ರಲ್ಲಿ ನಡೆದಿತ್ತು. 2021ರಲ್ಲಿ ಕೋವಿಡ್ ಕಾರಣಕ್ಕೆ ನಡೆದಿರಲಿಲ್ಲ” ಎಂದು ಹೇಳಿದರು.

“ಕುಂಭಮೇಳದಲ್ಲಿ ಸ್ವಚ್ಚತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಕಲ್ಪಿಸಬೇಕು. ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆಎಸ್ಆರ್‌ಟಿಸಿ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಸೂಚಿಸಿದರು.
ವಿಧಾನ ಪರಿಷತ್ ಸದಸ್ಯ ಡಾ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, “3 ದಿನ ಕಾರ್ಯಕ್ರಮ ನಡೆಯಲಿದ್ದು, ಲಕ್ಷಾಂತರ ಭಕ್ತರು ಆಗಮಿಸಿ ಕಾವೇರಿ ಆರತಿಯನ್ನು ಫೆಬ್ರವರಿ 11ರಂದು ಮಾಡಲಾಗುತ್ತದೆ. ಹಾಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಬೇಕು. ಸ್ನಾನ ಘಟ್ಟಗಳಲ್ಲಿ ಸ್ವಚ್ಚತೆ ಹಾಗೂ ಮುನ್ನೆಚ್ಚರಿಕೆ ಕ್ರಮವಹಿಸಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಆಕ್ರಮವಾಗಿ ಸೇಂದಿ ಮಾರಾಟ; ಆರೋಪಿಗಳು ಪೊಲೀಸರ ವಶ
ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ ಮಾತನಾಡಿ, “ಅಗ್ನಿ ಅವಘಡ ಮುನ್ನೆಚ್ಚರಿಕೆ, ಕುಟೀರಗಳ ಭದ್ರತೆ, ಉತ್ತಮ ರಸ್ತೆಗಳ ಸಂಪರ್ಕ,
ನದಿಯಲ್ಲಿ ಸ್ನಾನ ಮಾಡಲು 5 ಕಡೆ ಜಾಗ, 1 ಯಾಗ ಶಾಲೆ, 6 ಕುಟೀರಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದರು.
ಜಿಲ್ಲಾ ಪಂಚಾಯತ್ ಸಿಇಒ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
