ಕುಡಿಯುವ ನೀರು ಪೂರೈಕೆ ಸೇರಿದಂತೆ ಬೇಸಿಗೆ ಸವಾಲುಗಳನ್ನು ಎದುರಿಸಲು ಸಜ್ಜಾಗುವಂತೆ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ ಗಾಯತ್ರಿ ಅಧಿಕಾರಿಗಳಿಗೆ ಸೂಚಿಸಿದರು.
ಮೈಸೂರಿನಲ್ಲಿ ಶುಕ್ರವಾರ ನಡೆದ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, “ಅಧಿಕಾರಿಗಳು ಸ್ಥಳಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ತಿಳಿದುಕೊಂಡು ತಕ್ಷಣ ಪರಿಹಾರ ಕಂಡುಕೊಳ್ಳಬೇಕು. ಬುಡಕಟ್ಟು ಕುಗ್ರಾಮಗಳಿಗೆ ಭೇಟಿ ನೀಡಿ, ಬುಡಕಟ್ಟು ಜನರ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗಿದೆಯೆ ಮತ್ತು ಅವರು ಸರ್ಕಾರದ ಯೋಜನೆಗಳನ್ನು ಪಡೆಯುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
“ಬುಡಕಟ್ಟು ಸಮುದಾಯಗಳ ದೂರುಗಳನ್ನು ಪರಿಹರಿಸದಿದ್ದರೆ, ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.
“ಮೈಸೂರು ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ಮೇವು ಸಾಗಣೆಯನ್ನು ನಿಷೇಧಿಸಲಾಗಿದೆ. ಅಧಿಕಾರಿಗಳು ಈ ಕುರಿತು ಖಾತರಿಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು” ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಫಸಲ್ ಬೀಮಾ ಯೋಜನೆ ದುರ್ಬಳಕೆ; ನರಸಣ್ಣ ನಾಯಕ ಆರೋಪ
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಅಭಿವೃದ್ಧಿ) ಕೃಷ್ಣರಾಜು ಡಿ.ಎಸ್ ಮಾತನಾಡಿ, “ಮನೆಗಳಲ್ಲಿ ಶೌಚಾಲಯ ನಿರ್ಮಿಸಬೇಕು. ವಿವಿಧ ಯೋಜನೆಗಳನ್ನು ವ್ಯವಸ್ಥಿತವಾಗಿ ಒದಗಿಸಲು ಅಧಿಕಾರಿಗಳು ಅರ್ಜಿಗಳನ್ನು ಸ್ವೀಕರಿಸಬೇಕು” ಎಂದು ಹೇಳಿದರು.