ದೇಶದಲ್ಲಿ ಹೆಚ್ಚು ಜನರು ಮಧುಮೇಹ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಸೂಕ್ತ ಸಮಯಕ್ಕೆ ಉತ್ತಮ ಚಿಕಿತ್ಸೆ ಪಡೆದರೆ ಮಧುಮೇಹವನ್ನು ನಿಯಂತ್ರಣಕ್ಕೆ ತರಬಹುದು. ಈ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ತಿಳಿಸಿದರು.
ವಿಶ್ವ ಮಧುಮೇಹ ದಿನದ ಅಂಗವಾಗಿ ಮೈಸೂರಿನ ಭಾನವಿ ಆಸ್ಪತ್ರೆ ವತಿಯಿಂದ ಆಸ್ಪತ್ರೆ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಸಾರ್ವಜನಿಕರ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರು ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಮೂತ್ರಪಿಂಡ ವೈಫಲ್ಯ ಹಾಗೂ ಕಣ್ಣಿನ ಮೇಲೆ ದುಷ್ಪರಿಣಾಮ ಬೀರುತ್ತದೆ. ಅದಕ್ಕಾಗಿ ವೈದ್ಯರ ಸಲಹೆಯಂತೆ ಉತ್ತಮ ಜೀವನ ಶೈಲಿ, ಆಹಾರ ಕ್ರಮ ಮತ್ತು ಕಾಲಕಾಲಕ್ಕೆ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಚಿಕಿತ್ಸೆ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಭಾನವಿ ಆಸ್ಪತ್ರೆ ವತಿಯಿಂದ ಈ ಕಾರ್ಯಕ್ರಮ ನಡೆಸುತ್ತಿರುವುದು ಪ್ರಶಂಸನೀಯ. ರೋಗ ಬರದ ರೀತಿಯಲ್ಲಿ ತಡೆಯುವುದು ಹಾಗೂ ಬಂದ ನಂತರದ ತೀವ್ರವಾಗದ ನಿಟ್ಟಿನಲ್ಲಿ ಚಿಕಿತ್ಸೆ ಪಡೆಯುವ ವಿಧಾನಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವೈದ್ಯರಾದ ಡಾ ವಿಜಯ್, ಡಾ ಚಂದನ್ ಸೇರಿದಂತೆ ಭಾನವಿ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.

