ಮಾದಕ ವಸ್ತುಗಳ ವ್ಯಸನದಿಂದ ಯುವಜನತೆ ದೂರವಿದ್ದು, ಶಿಕ್ಷಣ, ಕ್ರೀಡೆ ಹಾಗೂ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ನ್ಯಾಯಾಧೀಶರು ಕರೆ ನೀಡಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಯೋಜನೆಯಡಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಎಚ್.ಡಿ.ಕೋಟೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಹಯೋಗದಲ್ಲಿ ಆಯೋಜಿಸಿದ್ದ ‘ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮತ್ತು ಕ್ಷೇಮಾಭಿವೃದ್ಧಿ ಮಾರ್ಗದರ್ಶನ-ಮಾದಕ ವಸ್ತು ಮುಕ್ತ ಭಾರತ’ ಜಾಥಾ ಕಾರ್ಯಕ್ರಮಕ್ಕೆ ಹಿರಿಯ ನ್ಯಾಯಾಧೀಶರಾದ ಮಹೇಶ್ ಮತ್ತು ಸಂತೋಷ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿವಿಧ ಘೋಷವಾಕ್ಯಗಳನ್ನು ಕೂಗಲಾಯಿತು. ‘ಮಾದಕ ವಸ್ತುಗಳು ಬೇಡ, ಉಜ್ವಲ ಭವಿಷ್ಯಕ್ಕೆ’, ‘ಪುಸ್ತಕ ಹಿಡಿಯುವ ಕೈಯಲ್ಲಿ ಮಾದಕ ವಸ್ತು ಬೇಡ’, ‘ನಶೆ ಬಿಡಿ, ಜೀವನ ಕಟ್ಟಿ’, ‘ಮಾದಕ ವಸ್ತು ಮುಕ್ತ ಭಾರತ ನಮ್ಮೆಲ್ಲರ ಸಂಕಲ್ಪ’, ‘ವ್ಯಸನ ಮುಕ್ತ ಯುವಜನತೆ, ಸದೃಢ ಭಾರತದ ಭರವಸೆ’ ಎಂಬ ಘೋಷಣೆಗಳ ಮೂಲಕ ಜಾಗೃತಿ ಮೂಡಿಸಲಾಯಿತು.
ಜಾಥಾವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಆರೋಗ್ಯ, ಸಾಮಾಜಿಕ ಹಾಗೂ ಕಾನೂನಾತ್ಮಕ ಪರಿಣಾಮಗಳ ಬಗ್ಗೆ ತಿಳಿವಳಿಕೆ ನೀಡಿತು.
ಈ ವಿಶೇಷ ಲೇಖನ ಓದಿದ್ದೀರಾ? ಕಾಲಜ್ಞಾನ ಸಾರಿದ ಮಂಟೇದಲಿಂಗಯ್ಯ’: ನೀಲಗಾರರ ಸ್ವರವಚನಗಳಲ್ಲಿ ಅಡಗಿರುವ ಜನಪದ ತತ್ವ
ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಕಾನೂನುಬಾಹಿರವಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಿದೆ. ಮಾದಕ ವ್ಯಸನದಿಂದ ಹೊರಬರಲು ಇಚ್ಛಿಸುವವರು ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಿ ಉಚಿತ ಕಾನೂನು ನೆರವು ಹಾಗೂ ಆಪ್ತ ಸಮಾಲೋಚನೆ ಸೌಲಭ್ಯ ಪಡೆದುಕೊಳ್ಳಬಹುದು ಎಂಬ ಸಂದೇಶವನ್ನೂ ಪ್ಲೇಕಾರ್ಡ್‌ಗಳ ಮೂಲಕ ಸಾರಲಾಯಿತು.
ಈ ವಿಶೇಷ ಲೇಖನ ಓದಿದ್ದೀರಾ? ಹಳೇ ಮೈಸೂರು | ಕಲ್ಯಾಣದಿಂದ ಬೊಪ್ಪೇಗೌಡನಪುರದವರೆಗೆ: ಜನಪದ ಕಾವ್ಯದ ಬೆಳಕಿನಲ್ಲಿ ಮಂಟೇಸ್ವಾಮಿ
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್, ಹಿರಿಯ ವಕೀಲರುಗಳು, ವಿವಿಧ ಇಲಾಖೆಗಳ ಮುಖ್ಯಸ್ಥರು, ಸೇಂಟ್ ಮೇರಿಸ್ ನರ್ಸಿಂಗ್ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು, ಎನ್‌ಸಿಸಿ ಕೆಡೆಟ್‌ಗಳು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.



