ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕರ್ನಾಟಕ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ ಎಸ್ ಶಿವರಾಮು ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಹೆಗಡೆ ವಿರುದ್ಧ ಘೋಷಣೆ ಕೂಗಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡ ಶಿವರಾಮು ಮಾತನಾಡಿ, “ಹೆಗಡೆ ಅವರ ಹೇಳಿಕೆ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಂಸ್ಕೃತಿಯನ್ನು ಬಹಿರಂಗಪಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಪಡೆಯಲು ಬಿಜೆಪಿ ಸಂಸದರು ಸಿಎಂ ವಿರುದ್ಧ ಕೆಟ್ಟ ಭಾಷೆಯನ್ನು ಬಳಸಿದ್ದಾರೆ” ಎಂದು ಅವರು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಪ್ರಚೋದನಾಕಾರಿ ಹೇಳಿಕೆ; ಸಂಸದ ಅನಂತ್ ಕುಮಾರ್ ಹೆಗಡೆ ಬಂಧನಕ್ಕೆ ಆಗ್ರಹ
“ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಸಂಜಯ್ ಗಾಂಧಿ ಗೋಹತ್ಯೆಯಿಂದ ಶಾಪಗ್ರಸ್ತರಾಗಿದ್ದರೆಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಈ ಹಿಂದೆ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಹೇಳಿಕೆಯನ್ನು ನೀಡಿದ್ದರು” ಎಂದು ತಿಳಿಸಿದರು.