ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡುವುದಾಗಿ ಹೇಳಿ ಜಮೀನು ಪಡೆದ ಕಾರ್ಖಾನೆಯವರು ಉದ್ಯೋಗ ನೀಡಿಲ್ಲವೆಂದು ಮನವೊಂದ ರೈತನೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ನಂಜನಗೂಡು ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿರುವ ಅಡಕನಹಳ್ಳಿ ಗ್ರಾಮದ ರೈತ ಸಿದ್ದರಾಜು ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕಾರ್ಖಾನೆ ನಿರ್ಮಾಣಕ್ಕಾಗಿ ಸಿದ್ದರಾಜು ತಮ್ಮ ಜಮೀನು ಕೊಟ್ಟಿದ್ದರು. ಕಾರ್ಖಾನೆಯವರು ಜಮೀನು ಪಡೆಯುವಾಗ ಸಿದ್ದರಾಜು ಅವರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು ಎಂದು ಹೇಳಲಾಗಿದೆ.
ಆದರೆ, ಕಾರ್ಖಾನೆ ನಿರ್ಮಾಣವಾದ ಬಳಿಕ ಉದ್ಯೋಗ ನೀಡಿರಲಿಲ್ಲ. ಕೈಗಾರಿಕೆಯವರು ಉದ್ಯೋಗ ಕೊಡದೇ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಸಿದ್ದರಾಜು ಪ್ರತಿಭಟನೆ ನಡೆಸಿದ್ದರು. ಆದರೆ, ಕಾರ್ಖಾನೆಯವರು ಸಿದ್ದರಾಜು ಅವರ ವಿರುದ್ಧವೇ ಐದಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದರು ಎಂದು ತಿಳಿದುಬಂದಿದೆ.
ಅತ್ತ ಉದ್ಯೋಗವೂ ಸಿಗದೆ, ಇತ್ತ ಪ್ರಕರಣಗಳನ್ನು ಎದುರಿಸುತ್ತಿದ್ದ ಸಿದ್ದರಾಜು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದರಾಜು ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಗ್ರಾಮದ ರೈತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ತೆರಳಿದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ, ಕಾರ್ಖಾನೆ ಮತ್ತು ಕೆಐಡಿಬಿಯಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.