ಆರ್‌ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಅಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 9ನೇ ತರಗತಿಗೆ ಪ್ರವೇಶ ನೀಡದೆ, ವರ್ಗಾವಣೆ ಪ್ರಮಾಣಪತ್ರ (ಟಿ.ಸಿ.) ನೀಡಿ ಕಳುಹಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಖಾಸಗಿ ಶಾಲೆಗಳ ಈ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ದಸಂಸ) ವತಿಯಿಂದ ನಗರದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭಿಸಲಾಗಿದೆ.
ನಗರದ ಪಡುವಾರಹಳ್ಳಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಕಚೇರಿ ಮುಂಭಾಗ ಮಂಗಳವಾರ ಸಂಜೆ ಆರಂಭವಾದ ಪ್ರತಿಭಟನೆಯಲ್ಲಿ ದಸಂಸ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆರ್‌ಟಿಇ ಅಡಿ ಪ್ರವೇಶ ಪಡೆದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಚೋರನಹಳ್ಳಿ ಶಿವಣ್ಣ, ನಗರದ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನೇಕ ಬಡ ಮಕ್ಕಳು ಆರ್‌ಟಿಇ ಅಡಿ ಪ್ರವೇಶ ಪಡೆದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥೆಯಡಿ 8ನೇ ತರಗತಿವರೆಗೆ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲಾಗಿದ್ದು, 9ನೇ ತರಗತಿಗೆ ಬಂದಾಗ ಶಾಲಾ ಆಡಳಿತ ಮಂಡಳಿಗಳು ಪ್ರವೇಶ ನಿರಾಕರಿಸುತ್ತಿವೆ ಎಂದು ಆರೋಪಿಸಿದರು.
ಶಾಲೆಯ ಸಂಪೂರ್ಣ ಶುಲ್ಕ ಪಾವತಿಸಿದರೆ ಮಾತ್ರ ಮುಂದುವರಿಯಲು ಅವಕಾಶ ನೀಡುವುದಾಗಿ, ಇಲ್ಲದಿದ್ದರೆ ಶಾಲೆ ತೊರೆಯುವಂತೆ ಹೇಳಿ ವಿದ್ಯಾರ್ಥಿಗಳಿಗೆ ಟಿ.ಸಿ. ನೀಡಲಾಗುತ್ತಿದೆ. ಇದರಿಂದ ಪ್ರಸಕ್ತ ಸಾಲಿನಲ್ಲಿ ಮೈಸೂರಿನಲ್ಲೇ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಖಾಸಗಿ ಶಾಲೆಗಳನ್ನು ತೊರೆದು ಸರ್ಕಾರಿ ಶಾಲೆಗಳಿಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದರು.
8ನೇ ತರಗತಿವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದ ಮಕ್ಕಳು ಏಕಾಏಕಿ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಿಗೆ ಸೇರ್ಪಡೆಯಾಗಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಅವರ ಕಲಿಕೆಗೆ ತೊಂದರೆಯಾಗುವುದರ ಜತೆಗೆ ಮಾನಸಿಕವಾಗಿಯೂ ವಿಚಲಿತರಾಗುತ್ತಿದ್ದಾರೆ. ಮಕ್ಕಳ ಶೈಕ್ಷಣಿಕ ಭವಿಷ್ಯದ ಮೇಲೆ ಇದು ಗಂಭೀರ ಪರಿಣಾಮ ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಆರ್‌ಟಿಇ ಅಡಿ ಪ್ರವೇಶ ಪಡೆದ ಮಕ್ಕಳ ಪೋಷಕರು ಖಾಸಗಿ ಶಾಲೆಗಳ ದುಬಾರಿ ಶುಲ್ಕ ಪಾವತಿಸುವ ಆರ್ಥಿಕ ಸಾಮರ್ಥ್ಯ ಹೊಂದಿಲ್ಲ. ಇಂತಹ ಸಂದರ್ಭದಲ್ಲಿ ಶಾಲೆಗಳು ಶುಲ್ಕ ಪಾವತಿಸುವಂತೆ ಒತ್ತಡ ಹೇರುತ್ತಿರುವುದು ಬಡ ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆಯುಂಟು ಮಾಡುತ್ತಿದೆ. ಈ ಸಮಸ್ಯೆ ಕುರಿತು ಶೈಕ್ಷಣಿಕ ವರ್ಷ ಆರಂಭವಾದ ಏಪ್ರಿಲ್‌ನಿಂದಲೇ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ ಕುತ್ತು, ರೈತರ ಬದುಕಿಗೆ ಹೊಡೆತ
ಒಂದೆಡೆ ಸರ್ಕಾರ ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಭರವಸೆ ನೀಡುತ್ತಿದ್ದರೆ, ಮತ್ತೊಂದೆಡೆ ಆರ್‌ಟಿಇ ಅಡಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳ ಶಿಕ್ಷಣ ಮುಂದುವರಿಕೆಗೆ ಸೂಕ್ತ ವ್ಯವಸ್ಥೆ ಕಲ್ಪಿಸದಿರುವುದು ದುರದೃಷ್ಟಕರ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ, 9ನೇ ತರಗತಿಗೆ ಪ್ರವೇಶ ನಿರಾಕರಿಸಿರುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿಕೆಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ಈ ವಿಶೇಷ ವರದಿ ಓದಿದ್ದೀರಾ: ಬರಗಾಲ | ಕಾಡಿನ ಮೌನದ ಹಿಂದೆ ಅಡಗಿದೆ ಜೀವಸಂಕುಲದ ಸಂಕಟ: ನೀರಿಲ್ಲದ ಕಾಡು-ಆಹಾರವಿಲ್ಲದ ವನ್ಯಜೀವಿ!
ಸರ್ಕಾರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸುವವರೆಗೂ ಅಹೋರಾತ್ರಿ ಧರಣಿ ಮುಂದುವರಿಸಲಾಗುವುದು ಎಂದು ಚೋರನಹಳ್ಳಿ ಶಿವಣ್ಣ ಎಚ್ಚರಿಕೆ ನೀಡಿದರು.
ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು: ನೀರಿಗಾಗಿ ಪರದಾಡುವ ವನ್ಯಜೀವಿಗಳು
ಪ್ರತಿಭಟನೆಯಲ್ಲಿ ಹಾರೋಹಳ್ಳಿ ನಟರಾಜ್, ಚನ್ನಕೇಶವ, ಗಾಂಧಿನಗರ ಗಿರಿ, ಹರಸಿನಕೆರೆ ಶಿವರಾಜು, ಭುಗತಗಳ್ಳಿ ಸಣ್ಣಮಾದು, ಸೋಮನಾಯಕ, ಶಿವಮೂರ್ತಿ, ಮೈಸೂರು ವಿಶ್ವವಿದ್ಯಾಲಯದ ಶಿವಕುಮಾರ್, ರಶ್ಮಿ, ಆನಂದ್ ಸೇರಿದಂತೆ ದಲಿತ ಸಂಘರ್ಷ ಸಮಿತಿಯ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.



