ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಆಹಾರ ಪದಾರ್ಥಗಳು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಲು ರಾಜ್ಯದ ಎಲ್ಲ ಗೋದಾಮುಗಳಿಗೆ ಸಿಸಿ ಕ್ಯಾಮರಾ ಹಾಗೂ ಪಡಿತರ ಸಾಗಣೆ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್ ಅರ್ಷದ್ ತಿಳಿಸಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿ, ರಾಜ್ಯದ ಪ್ರತಿಯೊಂದು ಗೋದಾಮಿನಲ್ಲೂ ಕೋಟ್ಯಂತರ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳ ಸಂಗ್ರಹವಿರುತ್ತದೆ. ಅವುಗಳ ಭದ್ರತೆಗಾಗಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು. ಪಡಿತರ ಸಾಗಿಸುವ ಲಾರಿಗಳಿಗೆ ಜಿಪಿಎಸ್ ವ್ಯವಸ್ಥೆ, ಕೇಂದ್ರ ಕಚೇರಿಯಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ತೂಕದ ಯಂತ್ರಗಳನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಹೇಳಿದರು.
ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಪಡೆಯುವ ಮಾನದಂಡಗಳನ್ನು ಪರಿಷ್ಕರಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ದುರುಪಯೋಗ ಸೇರಿದಂತೆ ವಿವಿಧ ಕಾರಣಗಳಿಂದ ಇತ್ತೀಚೆಗೆ 4.5 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. ಇದರಿಂದ ಅರ್ಹ ಫಲಾನುಭವಿಗಳಿಗೆ ತೊಂದರೆಯಾಗದಂತೆ ತಾತ್ಕಾಲಿಕವಾಗಿ ಪಡಿತರ ನೀಡುವಂತೆ ಆದೇಶಿಸಲಾಗಿದೆ. ರಾಜ್ಯದ ಸುಮಾರು 4.50 ಕೋಟಿ ಜನರಿಗೆ ಸೌಲಭ್ಯ ಒದಗಿಸುತ್ತಿರುವ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.
ಅನ್ನಭಾಗ್ಯ ಯೋಜನೆ ಆರಂಭವಾಗಿ 14 ವರ್ಷಗಳಾಗಿವೆ. ಯಾವುದೇ ಬಡವರು ಬಿಪಿಎಲ್ ಕಾರ್ಡ್ನಿಂದ ವಂಚಿತರಾಗಬಾರದು ಹಾಗೂ ಯಾರೊಬ್ಬರೂ ಹಸಿವಿನಿಂದ ಮಲಗಬಾರದು ಎಂಬ ಉದ್ದೇಶದಿಂದ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸಲಾಗುವ ಆಹಾರ ಪದಾರ್ಥಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಆಹಾರ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಕಳೆದ ಮೂರು ವರ್ಷಗಳಲ್ಲಿ ಪಡಿತರ ಅಕ್ರಮಕ್ಕೆ ಸಂಬಂಧಿಸಿದಂತೆ 1,497 ಎಫ್ಐಆರ್ಗಳನ್ನು ದಾಖಲಿಸಲಾಗಿದ್ದು, 86,181 ಕ್ವಿಂಟಾಲ್ ಆಹಾರ ಧಾನ್ಯ ಹಾಗೂ ₹49.38 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 2023ರ ಜೂನ್ನಿಂದ 2026ರ ಜುಲೈ 31ರವರೆಗೆ 3,70,803 ಹೊಸ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ. ಆದ್ಯತಾ ಪಡಿತರ ಚೀಟಿಗಾಗಿ ಬಾಕಿ ಇರುವ 1,30,546 ಅರ್ಜಿಗಳ ಪರಿಶೀಲನೆ ಮತ್ತು ವಿಲೇವಾರಿ ಪ್ರಗತಿಯಲ್ಲಿದೆ ಎಂದರು.
ಈ ವಿಶೇಷ ಸುದ್ದಿ ಓದಿದ್ದೀರಾ?ಹಳೇ ಮೈಸೂರಿನ ‘ನೀರ್ ಸಾಬ್’: ನೀರಿನಿಂದ ಪಂಚಾಯತ್ ರಾಜ್ವರೆಗೆ ಜನರ ಬದುಕಿಗೆ ದಾರಿ ತೋರಿದ ಅಪರೂಪದ ನಾಯಕ
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ, ಉಪಾಧ್ಯಕ್ಷ ರವಿ ಪಾಂಡವಪುರ ಹಾಗೂ ಗ್ರಾಮಾಂತರ ಉಪಾಧ್ಯಕ್ಷ ದಾ.ರಾ. ಮಹೇಶ್ ಇದ್ದರು.





