ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರು, ಯುವಕರು ಹಾಗೂ ಸಾಮಾನ್ಯ ಜನರ ಬದುಕಿಗೆ ಆರ್ಥಿಕ ಭದ್ರತೆ ಒದಗಿಸುವ ಮೂಲಕ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ನೆರವಾಗಿವೆ ಎಂದು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಆಡಳಿತ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಆಯೋಜಿಸಿದ್ದ ‘ಸಾಧನೆಯ ಮೂರು ವರ್ಷಗಳು’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ತಾಲೂಕಿನ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಲಾಗಿದ್ದು, ಜನಸಾಮಾನ್ಯರು, ಮಹಿಳೆಯರು ಮತ್ತು ಯುವಕರು ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿವೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸುಮಾರು ₹55 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದ್ದು, ತಾಲೂಕಿನ ಸಾವಿರಾರು ಕುಟುಂಬಗಳು ಇದರ ಪ್ರಯೋಜನ ಪಡೆಯುತ್ತಿವೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು ದೊರೆತಿದ್ದು, ಪ್ರತಿದಿನ ಸುಮಾರು 35 ಸಾವಿರ ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಸೌಲಭ್ಯ ಬಳಸುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ ಕೋಟ್ಯಂತರ ರೂಪಾಯಿ ಮೌಲ್ಯದ ವಿದ್ಯುತ್ ಸಬ್ಸಿಡಿ ನೀಡಲಾಗಿದ್ದು, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಮೂಲಕವೂ ಸಾವಿರಾರು ಫಲಾನುಭವಿಗಳು ಲಾಭ ಪಡೆದಿದ್ದಾರೆ ಎಂದು ತಿಳಿಸಿದರು.
ಚುನಾವಣಾ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ವಿರೋಧ ಪಕ್ಷಗಳು ಟೀಕೆ ಮಾಡಿದ್ದರೂ, ಯೋಜನೆಗಳು ಯಶಸ್ವಿಯಾಗಿ ಜಾರಿಯಾದ ಬಳಿಕ ಇತರ ರಾಜ್ಯಗಳೂ ಇದೇ ಮಾದರಿಯನ್ನು ಅನುಸರಿಸುತ್ತಿರುವುದು ಕರ್ನಾಟಕಕ್ಕೆ ಹೆಮ್ಮೆಯ ಸಂಗತಿಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಆರ್ಥಿಕ ಸ್ವಾತಂತ್ರ್ಯ ಹೊಂದಿ ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿದ್ದು, ಅನ್ನಭಾಗ್ಯ ಯೋಜನೆಯ ಮೂಲಕ ಬಡವರ ಹಸಿವು ನೀಗಿಸಿ ರಾಜ್ಯವನ್ನು ಹಸಿವು ಮುಕ್ತಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ನಿತಿನ್ ವೆಂಕಟೇಶ್ ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ (ಇಒ) ಸುನೀಲ್ ಕುಮಾರ್, ಸರ್ಕಾರದ ಕಲ್ಯಾಣ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಈ ವೇಳೆ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮಹಿಳಾ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ತಮ್ಮ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸಿರುವ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು.
ಈ ವಿಶೇಷ ಸುದ್ದಿ ಓದಿದ್ದೀರಾ?ಅರಣ್ಯ, ಹಾಡಿ, ದುರ್ಗಮ ಹಾದಿಗಳ ನಡುವೆ ‘SIR’ ಶೇ.100: ಚಾಮರಾಜನಗರದ ಸಾಧನೆ ಹೇಗೆ ಸಾಧ್ಯವಾಯಿತು?
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ಕರೀಗೌಡ, ಧನರಾಜ್, ಆಯತನಹಳ್ಳಿ ಮಹದೇವ್, ಸಿಡಿಪಿಒ ವೀಣಾ, ಪಂಚ ಗ್ಯಾರಂಟಿ ಯೋಜನೆ ಸದಸ್ಯರಾದ ವಿಂದ್ಯಾ, ರವಿ ಚಪ್ಪರದಹಳ್ಳಿ, ಹರ್ಷದ್, ಸುರೇಶ್ ಸೇರಿದಂತೆ ಹಲವರು ಇದ್ದರು.




