ಮೈಸೂರು ಜಿಲ್ಲೆ, ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಹಾಗೂ ಅವರ ಆಪ್ತ ಸಹಾಯಕ ಶಿವಕುಮಾರ್ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದೂರುದಾರರು ನೀಡಿದ ಮಾಹಿತಿಯ ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಎಚ್.ಡಿ.ಕೋಟೆ ತಾಲ್ಲೂಕಿನ ಸರ್ವೇ ನಂಬರ್ 17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಪ್ರಕರಣವು ಕಳೆದ ಒಂದು ವರ್ಷದಿಂದ ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಿವಾಸಿ ಡಾ. ರೂಪಾ ಅವರಿಂದ ಉಪವಿಭಾಗಾಧಿಕಾರಿ ಕಾವ್ಯಾರಾಣಿ ₹10.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಪೈಕಿ ಮೊದಲ ಕಂತಾಗಿ ₹5 ಲಕ್ಷವನ್ನು ಈಗಾಗಲೇ ಪಡೆದಿದ್ದರೆ, ಉಳಿದ ₹5.50 ಲಕ್ಷವನ್ನು ಎರಡನೇ ಕಂತಾಗಿ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉಪವಿಭಾಗಾಧಿಕಾರಿಯ ನಿವಾಸದಲ್ಲೇ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಅವರನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಲಾಗಿದೆ.
ಈ ಸಂಬಂಧ ಕಾವ್ಯಾರಾಣಿ ಅವರನ್ನು ವಶಕ್ಕೆ ಪಡೆದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಲೋಕಾಯುಕ್ತ ಡಿವೈಎಸ್‌ಪಿ ಶೈಲೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವಿಶೇಷ ಸುದ್ದಿ ಓದಿದ್ದೀರಾ?ಅರಣ್ಯ, ಹಾಡಿ, ದುರ್ಗಮ ಹಾದಿಗಳ ನಡುವೆ ‘SIR’ ಶೇ.100: ಚಾಮರಾಜನಗರದ ಸಾಧನೆ ಹೇಗೆ ಸಾಧ್ಯವಾಯಿತು?
ಕಾರ್ಯಾಚರಣೆಯಲ್ಲಿ ತನಿಖಾಧಿಕಾರಿ ರವಿಕುಮಾರ್, ಡಿವೈಎಸ್‌ಪಿ ದಿನಕರ್ ಶೆಟ್ಟಿ, ಇನ್ಸ್‌ಪೆಕ್ಟರ್ ವೀಣಾ ನಾಯಕ್ ಹಾಗೂ ಲೋಕಾಯುಕ್ತ ಸಿಬ್ಬಂದಿ ಭಾಗವಹಿಸಿದ್ದರು. ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಮುಂದುವರಿಸಿದ್ದಾರೆ.




