ಸಂತಕವಿ ಕನಕದಾಸರು ತಮ್ಮ ಸಾಹಿತ್ಯ, ಕೀರ್ತನೆ ಹಾಗೂ ತತ್ವಪದಗಳ ಮೂಲಕ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಅಸಮಾನತೆ ಮತ್ತು ಮೌಢ್ಯಗಳನ್ನು ಪ್ರಶ್ನಿಸಿ ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಸಾರಿದ ಮಹಾನ್ ಸಮಾಜ ಸುಧಾರಕರು. ಅವರ ಸಾಹಿತ್ಯ ಕೇವಲ ಭಕ್ತಿಯ ಅಭಿವ್ಯಕ್ತಿಯಲ್ಲ, ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿದೆ ಎಂದು ನಾಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ನಗರದ ಕಲಾಮಂದಿರದಲ್ಲಿ ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಂತ ಶ್ರೀ ಕನಕದಾಸರ ಜಯಂತೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ದಾಸಶ್ರೇಷ್ಠ ಸಂತಕವಿ ಶ್ರೀ ಕನಕದಾಸರ 539ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ, ಕನಕದಾಸರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಕನಕದಾಸರು ತಮ್ಮ ಕೀರ್ತನೆಗಳು ಮತ್ತು ತತ್ವಪದಗಳ ಮೂಲಕ ಅಂದಿನ ಸಮಾಜದಲ್ಲಿದ್ದ ಜಾತಿ ತಾರತಮ್ಯ, ಅಸಮಾನತೆ ಹಾಗೂ ಮೌಢ್ಯಗಳನ್ನು ಪ್ರಶ್ನಿಸುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿದ್ದರು. ಅವರ ವಿಚಾರಧಾರೆಗಳು ಮನುಷ್ಯನ ಘನತೆ, ಸಮಾನ ಹಕ್ಕುಗಳು ಮತ್ತು ಮಾನವೀಯ ಮೌಲ್ಯಗಳಿಗೆ ಮಹತ್ವ ನೀಡುತ್ತವೆ. ಹೀಗಾಗಿ ಕನಕದಾಸರ ಸಾಹಿತ್ಯ ಇಂದಿಗೂ ಸಮಾಜಕ್ಕೆ ಮಾರ್ಗದರ್ಶನ ನೀಡುವ ಶಕ್ತಿಯನ್ನು ಹೊಂದಿದೆ ಎಂದರು.
ಕನಕದಾಸರು ಸಾರಿದ ಸಮಾನತೆ, ಸಹಬಾಳ್ವೆ, ಮಾನವೀಯತೆ ಮತ್ತು ಸಾಮಾಜಿಕ ನ್ಯಾಯದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ಚಿಂತನೆಗಳು ಕೇವಲ ಜಯಂತಿ ಆಚರಣೆ ಮತ್ತು ಭಾಷಣಗಳಿಗೆ ಸೀಮಿತವಾಗದೆ ಪ್ರತಿಯೊಬ್ಬರ ಬದುಕಿನ ಭಾಗವಾಗಬೇಕು. ಈ ನಿಟ್ಟಿನಲ್ಲಿ ಕನಕದಾಸರ ಕೀರ್ತನೆಗಳು ಹಾಗೂ ವಿಚಾರಧಾರೆಗಳನ್ನು ಮನೆಮನೆಗೂ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು 2014ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕನಕದಾಸರ ಸಾಹಿತ್ಯ ಮತ್ತು ಕೀರ್ತನೆಗಳನ್ನು ನಾಡಿನ ಜನತೆಗೆ ಮತ್ತಷ್ಟು ವ್ಯಾಪಕವಾಗಿ ಪರಿಚಯಿಸುವ ಉದ್ದೇಶದಿಂದ 1.80 ಕೋಟಿ ರೂ. ಅನುದಾನ ಒದಗಿಸಿದ್ದರು. ಇಂತಹ ಪ್ರಯತ್ನಗಳು ನಾಡಿನ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಪರಂಪರೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸಲು ಸಹಕಾರಿಯಾಗಿವೆ ಎಂದು ಸ್ಮರಿಸಿದರು.

ಕನಕದಾಸರ ಆದರ್ಶಗಳನ್ನು ಕೇವಲ ಸ್ಮರಿಸುವುದಷ್ಟೇ ಅಲ್ಲದೆ, ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜಾತಿ, ಧರ್ಮ ಮತ್ತು ವರ್ಗಗಳ ಆಧಾರದ ತಾರತಮ್ಯವಿಲ್ಲದ ಸಮಾನತೆ ಹಾಗೂ ಸೌಹಾರ್ದತೆಯ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ವಿಶೇಷ ವರದಿ ಓದಿದ್ದೀರಾ? ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?
ಕನಕದಾಸರ ಸಾಹಿತ್ಯ ಕನ್ನಡದ ಭಕ್ತಿ ಪರಂಪರೆಯಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ. ‘ರಾಮಧಾನ್ಯ ಚರಿತೆ’, ‘ಮೋಹನತರಂಗಿಣಿ’, ‘ನಳಚರಿತ್ರೆ’ ಸೇರಿದಂತೆ ಅವರ ಕೃತಿಗಳು ಸಾಹಿತ್ಯಿಕ ಮೌಲ್ಯದ ಜೊತೆಗೆ ಸಾಮಾಜಿಕ ಸಂದೇಶಗಳನ್ನೂ ಒಳಗೊಂಡಿವೆ. ವಿಶೇಷವಾಗಿ ಅವರ ಕೀರ್ತನೆಗಳು ಜಾತಿ ಶ್ರೇಷ್ಠತೆಯ ಕಲ್ಪನೆಯನ್ನು ಪ್ರಶ್ನಿಸಿ ಮನುಷ್ಯನ ಅಂತರಂಗದ ಶುದ್ಧತೆ, ಭಕ್ತಿ ಮತ್ತು ಮಾನವೀಯತೆಯೇ ಶ್ರೇಷ್ಠ ಎಂಬ ತತ್ವವನ್ನು ಪ್ರತಿಪಾದಿಸುತ್ತವೆ. ಉಡುಪಿಯ ಶ್ರೀಕೃಷ್ಣನ ದರ್ಶನಕ್ಕೆ ಸಂಬಂಧಿಸಿದ ಕನಕನ ಕಿಂಡಿ ಪ್ರಸಂಗವೂ ಅವರ ಭಕ್ತಿ ಮತ್ತು ಸಾಮಾಜಿಕ ಸಮಾನತೆಯ ಹೋರಾಟದ ಸಂಕೇತವಾಗಿ ಇಂದಿಗೂ ಜನಮಾನಸದಲ್ಲಿ ನೆಲೆಸಿದೆ.
ಈ ವಿಶೇಷ ಲೇಖನ ಓದಿದ್ದೀರಾ? ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ ಐಕ್ಯತೆ ಬಲವಾಗಲಿ
ಕಾಗಿನೆಲೆ ಕನಕಗುರುಪೀಠದ ಪರಮಪೂಜ್ಯ ಡಾ. ಶಿವಾನಂದಪುರಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ, ಮಾಜಿ ಶಾಸಕ ಹಾಗೂ ಸಂತ ಶ್ರೀ ಕನಕದಾಸರ ಜಯಂತೋತ್ಸವ ಸಮಿತಿ ಅಧ್ಯಕ್ಷ ಎಂ.ಕೆ. ಸೋಮಶೇಖರ್, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ನಿವೃತ್ತ ಶಿಕ್ಷಣಾಧಿಕಾರಿ ಹಾಗೂ ಹರಿಕಥಾ ವಿದ್ವಾಂಸ ಎಂ.ಬಿ. ನಿಂಗಪ್ಪ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತ ಎನ್. ವಿಷ್ಣುವರ್ಧನ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್ ಸೇರಿದಂತೆ ಹಲವು ಗಣ್ಯರು ಇದ್ದರು.




