ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರತ್ನಾಕರ ವಾಲ್ಮೀಕಿ ಯುವಕರ ನಾಯಕರ ಸಂಘ, ಸರಗೂರು ಇವರ ವತಿಯಿಂದ ವಿವಿಧ ಸರ್ಕಾರಿ ಆರೋಗ್ಯ ಸಂಸ್ಥೆಗಳು ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಹಯೋಗದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಶರತ್, ಗ್ರಾಮೀಣ ಭಾಗದ ಜನರಿಗೆ ಒಂದೇ ಸ್ಥಳದಲ್ಲಿ ವಿವಿಧ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಶಿಬಿರ ಆಯೋಜಿಸಲಾಗಿದೆ. ಕಣ್ಣಿನ ತಪಾಸಣೆ, ದಂತ ತಪಾಸಣೆ, ಮೂಳೆ ತಪಾಸಣೆ, ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ತಜ್ಞ ವೈದ್ಯರಿಂದ ತಪಾಸಣೆ ನಡೆಸಲಾಗುತ್ತಿದೆ. ಸಾಗರೆ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಹಿರಿಯ ವೈದ್ಯಾಧಿಕಾರಿ ಡಾ. ಸೋಮಣ್ಣ ಮಾತನಾಡಿ, ಗ್ರಾಮೀಣ ಪ್ರದೇಶದ ಜನರಿಗೆ ಉಚಿತವಾಗಿ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಿವೆ. ಜಿಲ್ಲಾ ಮಟ್ಟದ ವೈದ್ಯರ ತಂಡವೇ ಗ್ರಾಮಕ್ಕೆ ಆಗಮಿಸಿ ಸೇವೆ ಒದಗಿಸುತ್ತಿರುವುದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರವಿಕುಮಾರ್ ಮಾತನಾಡಿ, ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ರತ್ನಾಕರ ವಾಲ್ಮೀಕಿ ಯುವಕರ ನಾಯಕರ ಸಂಘ ಆಯೋಜಿಸಿರುವ ಈ ಶಿಬಿರದ ಮುಖ್ಯ ಉದ್ದೇಶ ಸಾಗರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದಾಗಿದೆ. ವಿವಿಧ ವಿಭಾಗಗಳ ತಜ್ಞ ವೈದ್ಯರಿಂದ ತಪಾಸಣೆ ನಡೆಸುವ ಮೂಲಕ ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.
ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಶರತ್ ಅವರು ಕೇಂದ್ರಕ್ಕೆ ಆಗಮಿಸಿದ ನಂತರ ಆಸ್ಪತ್ರೆಯ ಅಭಿವೃದ್ಧಿ ಹಾಗೂ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮಾಡುತ್ತಿದ್ದು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಈ ವಿಶೇಷ ವರದಿ ಓದಿದ್ದೀರಾ? ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?
ಶಿಬಿರದಲ್ಲಿ ಒಟ್ಟು 180 ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದು, 32 ಮಂದಿ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಶಿಬಿರದಲ್ಲಿ ಹೆಚ್.ಡಿ.ಕೋಟೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಮೈಸೂರಿನ ಅವಂತ್ ಬಿ.ಕೆ.ಜಿ. ಆಸ್ಪತ್ರೆ, ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಕೆ.ಆರ್. ಆಸ್ಪತ್ರೆಯ ರಕ್ತನಿಧಿ ಕೇಂದ್ರ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ತಜ್ಞ ವೈದ್ಯರು ಮತ್ತು ಸಿಬ್ಬಂದಿ ಭಾಗವಹಿಸಿ ಸೇವೆ ಸಲ್ಲಿಸಿದರು.
ಈ ವಿಶೇಷ ಲೇಖನ ಓದಿದ್ದೀರಾ? ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ ಐಕ್ಯತೆ ಬಲವಾಗಲಿ
ಕಾರ್ಯಕ್ರಮದಲ್ಲಿ ರತ್ನಾಕರ ಸಂಘದ ಅಧ್ಯಕ್ಷ ಸಣ್ಣಸ್ವಾಮಿ ನಾಯ್ಕ್, ವೇಣು, ರವಿ, ಬಸಾಪುರ ರವಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಸದಸ್ಯರು, ಗ್ರಾಮದ ಮುಖಂಡರು, ಹಿರಿಯರು, ಯುವಕರು ಹಾಗೂ ಸಾರ್ವಜನಿಕರು ಇದ್ದರು.



