ರಾಗಿ ಖರೀದಿ ಮಾಡಿರುವ ರೈತರಿಗೆ ಸರ್ಕಾರದಿಂದ ಹಣ ಬಿಡುಗಡೆ ಮಾಡದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸೋಮವಾರ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ರೈತ ಸಂಘದ ಮುಖಂಡರೊಂದಿಗೆ ಸಭೆ ನಡೆಸಿ, ರಾಗಿ ಖರೀದಿ ಹಣವನ್ನು ಶೀಘ್ರ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಡಳಿತದ ಅಧಿಕಾರಿಗಳು, ರಾಗಿ ಖರೀದಿ ಕೇಂದ್ರಗಳಿಗೆ ಸಂಬಂಧಿಸಿದಂತೆ ಶುಕ್ರವಾರದವರೆಗೆ ಬಾಕಿ ಇದ್ದ ಹಣದ ಒಂದು ಭಾಗವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಉಳಿದ ಹಣವನ್ನು ಮುಂದಿನ 3-4 ದಿನಗಳೊಳಗೆ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ರಾಗಿ ಖರೀದಿಗೆ ಸಂಬಂಧಿಸಿದ ಮಾಹಿತಿಯನ್ನು ಜಿಲ್ಲಾಡಳಿತವು ಸರ್ಕಾರಕ್ಕೆ ಸಮರ್ಪಕವಾಗಿ ನೀಡದಿರುವುದರಿಂದ ಸಮಸ್ಯೆ ಉಂಟಾಗಿದೆ. ಈ ಲೋಪವನ್ನು ಕೂಡಲೇ ಸರಿಪಡಿಸಿ, ರೈತರಿಗೆ ಬರಬೇಕಾದ ಹಣವನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಸೇರಿದಂತೆ ಮುಖಂಡರು ರಾಗಿ ಖರೀದಿ ಹಣ ಪಾವತಿ ವಿಳಂಬ, ರೈತರು ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಹಲವು ವಿಷಯಗಳ ಕುರಿತು ಜಿಲ್ಲಾಧಿಕಾರಿಗಳ ಗಮನ ಸೆಳೆದರು.
ರೈತರ ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ರಾಗಿ ಖರೀದಿ ಹಣವನ್ನು ತಕ್ಷಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಹಾಗೂ ರೈತರಿಗೆ ಸಂಬಂಧಿಸಿದ ಇತರ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಸಭೆಯನ್ನು ಮುಕ್ತಾಯಗೊಳಿಸಲಾಯಿತು.
ಈ ವಿಶೇಷ ಸುದ್ದಿ ಓದಿದ್ದೀರಾ?ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಕನ್ನಡಿ ಹಿಡಿದ ಆದೇಶ: ₹3,383ರ ಎಫ್‌ಆರ್‌ಪಿ ಸಾಕೇ?
ಸಭೆಯಲ್ಲಿ ತಾಲ್ಲೂಕು ಅಧ್ಯಕ್ಷರಾದ ಬೆಂಕಿಪುರ ಚಿಕ್ಕಣ್ಣ, ನಂಜನಗೂಡು ತಾಲೂಕು ಅಧ್ಯಕ್ಷ ಮಹೇಶ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ಜಿಲ್ಲಾ ಖಜಾಂಚಿ ಈಶ್ವರ್, ಕಾರ್ಯದರ್ಶಿ ರಾಮೇಗೌಡ, ಬಸವರಾಜೇಗೌಡ, ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ಕೋಣಸೂರು ಆನಂದ್, ದೇವರಾಜು, ದಶರಥ, ಗುರುರಾಜು ಸೇರಿದಂತೆ ವಿವಿಧ ತಾಲೂಕುಗಳ ಪದಾಧಿಕಾರಿಗಳು ಹಾಗೂ ರೈತ ಸಂಘದ ಮುಖಂಡರು ಇದ್ದರು.




