ಸಂವಿಧಾನವು ನಮ್ಮೆಲ್ಲರ ನ್ಯಾಯದ ಆಧಾರ, ಸಮಾನತೆಯ ಭಂಡಾರ ಹಾಗೂ ಪ್ರಜಾಪ್ರಭುತ್ವಕ್ಕೆ ಶಕ್ತಿಯ ಸಂಚಾರವಾಗಿದೆ. ಇದು ನಮ್ಮೆಲ್ಲರ ಪಾಲಿಗೆ ಪವಿತ್ರ ಗ್ರಂಥವಾಗಿದ್ದು, ದೇಶದ ಅಂತರಾತ್ಮದಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮೈಸೂರು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತೀಯ ಸಂವಿಧಾನದ ಮಹತ್ವ, ಅದರ ಆಶಯಗಳು ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನ ಸಮಾನ ಹಕ್ಕುಗಳ ಕುರಿತು ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚನೆಯ ಮಹತ್ವದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದರು. ದೇಶದ ಪ್ರತಿಯೊಬ್ಬ ಪ್ರಜೆಗೂ ಬದುಕುವ ಹಕ್ಕು, ಸ್ವಾತಂತ್ರ್ಯ ಮತ್ತು ನ್ಯಾಯ ದೊರೆಯುವಂತಹ ವ್ಯವಸ್ಥೆಯನ್ನು ರೂಪಿಸಿಕೊಟ್ಟ ಅವರ ಕೊಡುಗೆ ಅಪಾರವಾಗಿದೆ ಎಂದು ಸ್ಮರಿಸಿದರು.
ಸಮಾಜದ ಪ್ರತಿಯೊಬ್ಬರ ಬದುಕಿನಲ್ಲಿಯೂ ಸಮಾನತೆಯ ಬೆಳಕು ಮೂಡಬೇಕು. ಶೋಷಿತರು, ಅವಕಾಶ ವಂಚಿತರು ಹಾಗೂ ವಿದ್ಯಾವಂತರಿಗೆ ಸಮಾನ ಅವಕಾಶಗಳು ದೊರೆಯಬೇಕು ಎಂಬುದು ಸಂವಿಧಾನದ ಮೂಲ ಆಶಯವಾಗಿದೆ. ಸಮಾಜದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ನ್ಯಾಯ ಹಾಗೂ ಸಮಾನ ಅವಕಾಶ ಕಲ್ಪಿಸುವ ಮೂಲಕ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸಬೇಕಿದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಅತ್ಯಂತ ಮಹತ್ವದ್ದಾಗಿದೆ. ದೇಶದ ಪ್ರಧಾನಮಂತ್ರಿಯ ಮತಕ್ಕೆ ಇರುವ ಮೌಲ್ಯವೇ ಸಾಮಾನ್ಯ ಪ್ರಜೆ ಮತ್ತು ಗ್ರಾಮ ಪಂಚಾಯಿತಿ ಸದಸ್ಯನ ಮತಕ್ಕೂ ಇದೆ. ಎಲ್ಲರ ಮತಕ್ಕೂ ಸಮಾನ ಮೌಲ್ಯವಿರುವುದು ಭಾರತೀಯ ಪ್ರಜಾಪ್ರಭುತ್ವದ ಬಹುದೊಡ್ಡ ಶಕ್ತಿಯಾಗಿದೆ ಎಂದು ತಿಳಿಸಿದರು.
ಶ್ರೀಮಂತರು ಮತ್ತು ಬಡವರು ಎಂಬ ಭೇದವಿಲ್ಲದೆ ಎಲ್ಲರಿಗೂ ಒಂದೇ ಕಾನೂನು ಹಾಗೂ ಒಂದೇ ನ್ಯಾಯ ಅನ್ವಯಿಸುತ್ತದೆ. ಸಂವಿಧಾನ ನೀಡಿರುವ ಹಕ್ಕುಗಳ ಮೂಲಕ ಪ್ರತಿಯೊಬ್ಬರೂ ನ್ಯಾಯ ಪಡೆಯಲು ಅವಕಾಶವಿದೆ. ಹೀಗಾಗಿ, ಸಂವಿಧಾನವನ್ನು ಕೇವಲ ಪುಸ್ತಕ ಅಥವಾ ಕಾನೂನುಗಳ ಸಂಕಲನವಾಗಿ ನೋಡದೆ, ನಮ್ಮ ಬದುಕಿನ ಮಾರ್ಗದರ್ಶಿಯಾಗಿ ಸ್ವೀಕರಿಸಬೇಕು. ಅದರ ಆಶಯಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು.
ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಸಂವಿಧಾನದ ಮೌಲ್ಯಗಳು, ಮೂಲಭೂತ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಪರಿಚಯಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಪಠ್ಯಕ್ರಮದಲ್ಲಿ ಸಂವಿಧಾನಕ್ಕೆ ಸಂಬಂಧಿಸಿದ ಪಾಠಗಳನ್ನು ಅಳವಡಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದರು.
ಇದಕ್ಕಾಗಿ ಪ್ರತ್ಯೇಕ ಸಮಿತಿಯನ್ನು ರಚಿಸಿ, ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಆಶಯಗಳು, ಮೂಲಭೂತ ಹಕ್ಕುಗಳು ಮತ್ತು ಮೌಲ್ಯಗಳಿಗೆ ಸಂಬಂಧಿಸಿದ ಪಾಠಗಳನ್ನು ರೂಪಿಸಲಾಗುವುದು. ಮಕ್ಕಳು ಸಂವಿಧಾನವನ್ನು ಕೇವಲ ಓದುವುದಷ್ಟೇ ಅಲ್ಲದೆ, ಅದರ ಮೌಲ್ಯಗಳನ್ನು ತಮ್ಮ ದೈನಂದಿನ ಬದುಕಿನಲ್ಲಿಯೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ವಿಶೇಷ ಲೇಖನ ಓದಿದ್ದೀರಾ? ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ ಐಕ್ಯತೆ ಬಲವಾಗಲಿ
ಸಂವಿಧಾನವು ಪ್ರತಿಯೊಬ್ಬ ಭಾರತೀಯನ ಹಕ್ಕು, ಗೌರವ, ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ರಕ್ಷಿಸುವ ಕವಚವಾಗಿದೆ. ಸಂವಿಧಾನದ ಅರಿವು ಮೂಡಿಸುವುದು ಸರ್ಕಾರದ ಜವಾಬ್ದಾರಿಯೂ ಆಗಿದೆ. ಭವಿಷ್ಯದ ಪ್ರಜೆಗಳಾದ ಮಕ್ಕಳಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸಬೇಕಿದೆ ಎಂದು ತಿಳಿಸಿದರು.



