ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಜನರ ಮತದಾನದ ಹಕ್ಕನ್ನು ಕಸಿಯುವ ಹುನ್ನಾರವಾಗಿದೆ ಎಂದು ಆರೋಪಿಸಿ, ಮೈಸೂರು ಜಿಲ್ಲೆಯ ಹುಣಸೂರಿನ ಸಂವಿಧಾನ ವೃತ್ತದಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ನಡೆಯಿತು.
ಸಂವಿಧಾನ ವೃತ್ತದಿಂದ ಆರಂಭವಾದ ಜಾಥಾವು ಕಲ್ಪತರು ವೃತ್ತದವರೆಗೆ ಕಾಲ್ನಡಿಗೆಯಲ್ಲಿ ಸಾಗಿತು. ಜಾಥಾದುದ್ದಕ್ಕೂ ಪ್ರತಿಭಟನಾಕಾರರು ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮತದಾನದ ಹಕ್ಕು ಸಂವಿಧಾನಬದ್ಧ ಹಕ್ಕಾಗಿದ್ದು, ಅದನ್ನು ದುರ್ಬಲಗೊಳಿಸುವ ಯಾವುದೇ ಕ್ರಮವನ್ನು ಸಹಿಸಲಾಗುವುದಿಲ್ಲ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ?ಕೆ ಆರ್ ಪೇಟೆ | ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಆಗ್ರಹಿಸಿ ಹೇಮಗಿರಿ ಶುಗರ್ಸ್ ವಿರುದ್ಧ ರೈತರ ಮುತ್ತಿಗೆ
ಜಾಥಾದಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ) ಹಿರಿಯ ಮುಖಂಡ ಹರಿಹರ ಆನಂದಸ್ವಾಮಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ತಾಲ್ಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ಅಗ್ರಹಾರ ರಾಮೇಗೌಡ, ದಶರಥ, ಡೀಡ್ ಸಂಸ್ಥೆಯ ಶ್ರೀಕಾಂತ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಅತ್ತಿಕುಪ್ಪೆ ರಾಮಕೃಷ್ಣ, ದಸಂಸ ಮುಖಂಡರಾದ ಅತ್ತಿಕುಪ್ಪೆ ಸಿದ್ದೇಶ್ ಹಾಗೂ ರಾಜು ಚಿಕ್ಕಹುಣಸೂರು ಸೇರಿದಂತೆ ಎಸ್‌ಡಿಪಿಐ, ಜೀವಿಕ ಹಾಗೂ ಆದಿವಾಸಿ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.





