ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸುವಂತಹ ನಿರ್ಣಯಗಳು ಹಾಗೂ ಯೋಜನೆಗಳನ್ನು ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳಬೇಕು. ಇಲ್ಲವಾದರೆ ವಿಶೇಷ ಅಧಿವೇಶನ ಅರ್ಥಹೀನವಾಗಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.
ಪತ್ರಿಕಾ ಹೇಳಿಕೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ 124 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಇನ್ನಷ್ಟು ತಾಲ್ಲೂಕುಗಳನ್ನು ಬರ ಪಟ್ಟಿಗೆ ಸೇರಿಸುವುದಾಗಿ ಹೇಳುತ್ತಾ ಕಾಲಹರಣ ಮಾಡಲಾಗುತ್ತಿದೆ. ಬರ ಪರಿಸ್ಥಿತಿಗೆ ಸ್ಪಂದಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ತೋರುತ್ತಿವೆ ಎಂದು ಆರೋಪಿಸಿದರು.
ರೈತರ ಕೃಷಿ ಸಾಲದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ ಶೇ.50ರಷ್ಟು ಸಾಲ ಮನ್ನಾ ಮಾಡಬೇಕು. ಬ್ಯಾಂಕುಗಳು ಕೃಷಿ ಸಾಲ ವಸೂಲಾತಿ ನಡೆಸುವುದಕ್ಕೆ ತಡೆ ನೀಡಬೇಕು. ಕೃಷಿ ಪಂಪ್‌ಸೆಟ್‌ಗಳಿಗೆ ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.
ಬರದಿಂದ ಉಂಟಾಗಿರುವ ಬೆಳೆ ನಷ್ಟಕ್ಕೆ ವೈಜ್ಞಾನಿಕ ಮಾನದಂಡದ ಆಧಾರದ ಮೇಲೆ ಸೂಕ್ತ ಪರಿಹಾರ ನೀಡಬೇಕು. ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ಪದೇಪದೇ ಎದುರಾಗುವ ಬರ ಪರಿಸ್ಥಿತಿಯನ್ನು ಶಾಶ್ವತವಾಗಿ ಎದುರಿಸಲು ದೂರದೃಷ್ಟಿಯ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹೇಳಿದರು.
ಈ ವಿಶೇಷ ವರದಿ ಓದಿದ್ದೀರಾ? E-KYC: ಎಲ್ಲವೂ ‘ಆನ್‌ಲೈನ್’… ಆದರೆ, ಜನರ ಸಂಕಷ್ಟ ಮಾತ್ರ ‘ಆಫ್‌ಲೈನ್’!
ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ರೈತರಿಗೆ ಪ್ರಯೋಜನವಾಗದ ನಿರ್ಣಯಗಳನ್ನು ಕೈಗೊಂಡರೆ ಅಥವಾ ರೈತ ಸಂಘದ ಹಕ್ಕೊತ್ತಾಯಗಳನ್ನು ಈಡೇರಿಸದಿದ್ದರೆ ಸೆಪ್ಟೆಂಬರ್ 28ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು. ಅಧಿವೇಶನ ಮುಗಿಸಿಕೊಂಡು ಹೊರಬರುವ ಸಚಿವರ ವಿರುದ್ಧ ‘ಪೊರಕೆ ಚಳವಳಿ’ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಈ ವಿಶೇಷ ವರದಿ ಓದಿದ್ದೀರಾ? ಡಿಬಿ ಕುಪ್ಪೆ-ಬಾವಲಿ ನಡುವಿನ ಕಳಪೆ ರಸ್ತೆ ಕಾಮಗಾರಿ
ರಾಜ್ಯದಲ್ಲಿ ಡಾ. ಕೆ. ಕಸ್ತೂರಿರಂಗನ್ ವರದಿ ಜಾರಿಯಾಗದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ವರದಿಯನ್ನು ಎಲ್ಲ ರಾಜಕೀಯ ಪಕ್ಷಗಳು ಪಕ್ಷಾತೀತವಾಗಿ ವಿರೋಧಿಸಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಬೇಕು. ಕಂಬಳವನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಅವರು ಮುಂದಿಟ್ಟರು.




