ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 25 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷವು ಗೆಲ್ಲುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕಾರ್ಯಕರ್ತರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕರೆ ನೀಡಿದರು.
ಚಾಮರಾಜನಗರ ಮತ್ತು ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯಿಂದ ತಾಂಡವಪುರದ ಕವಲಂದೆ ಬಳಿ ಇರುವ ನೀಲಾಂಬಿಕೆ ಕಲ್ಯಾಣ ಮಂಟಪದಲ್ಲಿ ನಡೆದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಆಕಾಂಕ್ಷಿಗಳ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ವೀಕ್ಷಕರಾಗಿ ಭಾಗವಹಿಸಿ ಮಾತನಾಡಿದರು.
“ಕಳೆದ ಬಾರಿ ಮಾಡಿದ ತಪ್ಪುಗಳನ್ನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಗೊಂದಲ ಮತ್ತು ತಪ್ಪುಗಳನ್ನು ಮಾಡದೆ ಒಗ್ಗಟ್ಟಿನಿಂದ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವು ಸಾಧಿಸಲು ಶ್ರಮ ವಹಿಸಬೇಕು” ಎಂದು ಹೇಳಿದರು.
“ಸಭೆಯಲ್ಲಿ ಈಗಾಗಲೇ ಎಂಟು ಜನ ಆಕಾಂಕ್ಷಿಗಳು ತಮ್ಮ ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ತಿಳಿಸಿದ್ದಾರೆ. ಅವರೂ ಕೂಡ, ʼಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ನಾವು ಕಾಂಗ್ರೆಸ್ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ದುಡಿಯುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಮುಂಬರುವ ಲೋಕಸಭಾ ಚುನಾವಣೆಗೆ ಇಂದಿನಿಂದಲೇ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಮ್ಮ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಪ್ರತಿ ಮನೆಮನೆಗೂ ತಿಳಿಸಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಬೇಕು” ಎಂದು ಆರೋಗ್ಯ ಸಚಿವ ಹಾಗೂ ಚಾಮರಾಜನಗರ ಲೋಕಸಭಾ ವೀಕ್ಷಕ ದಿನೇಶ್ ಗುಂಡೂರಾವ್ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಸ್ಪೃಶ್ಯತಾ ನಿಷೇಧ ಮತ್ತು ನಿಯಂತ್ರಣ ಎಸ್‌ಸಿ/ಎಸ್‌ಟಿ ಕಾಯ್ದೆಯ ಮಹತ್ವದ ಕಾರ್ಯಗಾರ
ಪೂರ್ವಭಾವಿ ಸಭೆಯಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್, ಶಾಸಕರುಗಳಾದ ಪುಟ್ಟರಂಗಶೆಟ್ಟಿ, ಕೃಷ್ಣಮೂರ್ತಿ, ಅನಿಲ್ ಚಿಕ್ಕಮಾದು, ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್, ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳಾದ ಸುನಿಲ್ ಬೋಸ್ ಎಂ ಶಿವಣ್ಣ, ನಂಜುಂಡಸ್ವಾಮಿ, ಡಾ. ಕಿರಣ್ ಪುಷ್ಪ, ಅಮರನಾಥ್ ಸೇರಿದಂತೆ ಒಟ್ಟು ಎಂಟು ಮಂದಿ ಆಕಾಂಕ್ಷಿಗಳು ಸಭೆಯಲ್ಲಿದ್ದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಮರಿಸ್ವಾಮಿ, ಡಾ. ಬಿ ಜೆ ವಿಜಯ್ ಕುಮಾರ್, ಕಾಂಗ್ರೆಸ್ ಪಕ್ಷದ ಎಂ ಲಕ್ಷ್ಮಣ್ ವೀರಶೈವ ಮುಖಂಡ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಗುರುಪಾದ ಸ್ವಾಮಿ ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು, ಬಿ ಎಂ ರಾಮು, ಬ್ಲಾಕ್ ಅಧ್ಯಕ್ಷರುಗಳಾದ ರಂಗಸ್ವಾಮಿ, ರಮೇಶ್, ಮುದ್ದೇಗೌಡ ಸೇರಿದಂತೆ ಎರಡು ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಕಾಂಗ್ರೆಸ್ ಕಾರ್ಯಕರ್ತರು ಸಭೆಯಲ್ಲಿ ಇದ್ದರು.