ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ಈಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಬೆಳವಣಿಗೆಯ ನಡುವೆಯೇ ರಾಷ್ಟ್ರೀಯ ಮಹಿಳಾ ಆಯೋಗವು ತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ‘ನಾವು ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಈ ಬಗ್ಗೆ ವಿಚಾರಣೆ ನಡೆಸಲು ಆಯೋಗದ ಸದಸ್ಯೆ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ಇಂದು(ಜು.26) ಉಡುಪಿ ಜಿಲ್ಲೆಗೆ ತೆರಳಲಿದ್ದಾರೆ’ ಎಂದು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿಂತೆ ಉಡುಪಿಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪೊಲೀಸರು ಎರಡು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಈ ನಡುವೆಯೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಘಟನೆಯ ಬಗ್ಗೆ ತನಿಖೆ ನಡೆಸಲು ತಾನು ಹೊರಟಿದ್ದೇನೆ ಎಂದು ಕೂಡ ಖುಷ್ಬೂ ಸುಂದರ್ ತಿಳಿಸಿದ್ದಾರೆ.