ಬಾಗೇಪಲ್ಲಿ ಪಟ್ಟಣದಲ್ಲಿ ಕನ್ನಡ ಭವನಕ್ಕಾಗಿ ಈಗಾಗಲೇ ಜಾಗ ಗುರುತಿಸಲಾಗಿದ್ದು ಮುಂದಿನ ಬಾರಿ ಕನ್ನಡ ಭವನದಲ್ಲೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಶ್ವಾಸನೆ ನೀಡಿದರು.
ಕನ್ನಡ ರಾಜ್ಯೋತ್ಸವ ಕನ್ನಡಿಗರ ಹೆಮ್ಮೆಯ ಹಬ್ಬವಾಗಿದ್ದು, ರಾಜ್ಯೋತ್ಸವ ಕೇವಲ ಸರ್ಕಾರಿ ಕಚೇರಿಗಳಿಗೆ ಸೀಮಿತವಾಗದೆ ಎಲ್ಲಾ ಮನೆಮನೆಗಳಲ್ಲಿ ಆಚರಿಸುವಂತಾಗಬೇಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಭಾಷಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಬಾಗೇಪಲ್ಲಿ ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲೆಯ ಆವರಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕನ್ನಡ ಬರಿ ಭಾಷೆಯಲ್ಲ. ಇದೊಂದು ಶಕ್ತಿ. ನಮ್ಮ ನಾಡು-ನುಡಿ, ಸಂಸ್ಕೃತಿಗೆ 2000 ವರ್ಷಗಳಿಗೂ ಮೀರಿದ ಭವ್ಯವಾದ ಇತಿಹಾಸವಿದೆ. ಬಾಗೇಪಲ್ಲಿ ತಾಲೂಕಿನಲ್ಲಿ ಕನ್ನಡ ನೆಲ, ಜಲ, ಬಾಷೆಗೆ ಧಕ್ಕೆಯಾದಾಗ ಹಾಗೂ ಯಾವುದೇ ರೀತಿಯ ಸಮಸ್ಯೆಗಳಾದಾಗ ಕನ್ನಡ ಸಂಘಟನೆಗಳು ಹೋರಾಟಗಳ ಧ್ವನಿ ಎತ್ತುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.
ಮುಂದಿನ ದಿನಗಳಲ್ಲಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ ನಿರುದ್ಯೋಗ ಸಮಸ್ಯೆ ನೀಗಿಸಲು ಕೈಗಾರಿಕೆಗಳನ್ನು ಸ್ಥಾಪಿಸಲು ಭೂಮಿ ಮಂಜೂರು ಮಾಡಲಾಗಿದ್ದು, ರೈತರು ಒಪ್ಪಿಗೆ ನೀಡಿದರೆ ಕೈಗಾರಿಕೆಗಳನ್ನು ಸ್ಥಾಪನೆ ಮಾಡುತ್ತೇನೆ ಎಂದು ಹೇಳಿದರು.
ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡುವ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಕಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಹೆಸರು ಬದಲಾವಣೆ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿಧ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ವಿವಿಧ ಶಾಲೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಇದನ್ನೂ ಓದಿ : ಈ ದಿನ ಸಂಪಾದಕೀಯ | ವಕ್ಫ್ ವಿವಾದವೆಂಬ ಕೃತಕ ಸೃಷ್ಟಿ – ಮತ್ತೊಮ್ಮೆ ಮಾಧ್ಯಮಗಳ ಬಣ್ಣ ಬಯಲು
ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಮನೀಶಾ ಮಹೇಶ್ ಪತ್ರಿ, ಬಿಇಓ ಎನ್.ವೆಂಕಟೇಶಪ್ಪ, ಪುರಸಭೆ ಅದ್ಯಕ್ಷ ಎ.ಶ್ರೀನಿವಾಸ್, ಸದಸ್ಯರಾದ ಗಡ್ಡಂ ರಮೇಶ್, ಎ.ನಂಜುಂಡಪ್ಪ, ಪುರಸಭೆ ಮುಖ್ಯಾಧಿಕಾರಿ ಎಂ.ಶ್ರೀನಿವಾಸ್, ಡಾ.ಸತ್ಯನಾರಾಯಣ ರೆಡ್ಡಿ, ಇಓ ರಮೇಶ್, ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ವರ್ಣಿ, ಕನ್ನಡ ಸಾಹಿತ್ಯ ಪರಿಷತ್ ಅದ್ಯಕ್ಷ ಡಿ.ಎನ್.ಕೃಷ್ಣಾರೆಡ್ಡಿ, ಶ್ರೀನಿವಾಸ್, ಈಶ್ವರಪ್ಪ, ಶಿವಪ್ಪ ಹಾಗೂ ವಿವಿಧ ಶಾಲೆಯ ಮಕ್ಕಳು ಶಿಕ್ಷಕರು ಹಾಜರಿದ್ದರು.