ಉತ್ತರ ಕನ್ನಡ: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ 312 ಹೆಚ್ಚುವರಿ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲಾಗುತ್ತಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಹಾಗೂ ಬಾಗಲಕೋಟೆ ವಿಭಾಗಗಳಿಂದ ಈ ಹೆಚ್ಚುವರಿ ವಿಶೇಷ ಬಸ್‌ಗಳ ಸೇವೆ ಕಲ್ಪಿಸಲಾಗುತ್ತಿದೆ.
ವಾರಾಂತ್ಯದ ಹಿನ್ನೆಲೆಯಲ್ಲಿ ಸೆ.11, ಸೆ.13 ಹಾಗೂ ಸೆ.14ರಂದು ಗಣೇಶ ಚತುರ್ಥಿ ಹಬ್ಬ ಇರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಶಿಕ್ಷಕರ ಪ್ರಾಮಾಣಿಕ ಸೇವೆಯಿಂದ ಉತ್ತರ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಮೂರನೇ ಸ್ಥಾನ: ಲಕ್ಷ್ಮಣ ಸವದಿ
ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಅಂತರರಾಜ್ಯ ಪ್ರಮುಖ ಸ್ಥಳಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಸೆ.11ರಿಂದ ಸೆ.13ರವರೆಗೆ ಹೆಚ್ಚುವರಿ ವಿಶೇಷ ಬಸ್‌ಗಳ ಸೌಲಭ್ಯ ಕಲ್ಪಿಸಲಾಗಿದೆ. ಹಬ್ಬದ ನಂತರ ಸೆ.14ರಿಂದ ಮುಂದಿನ ದಿನಗಳಲ್ಲಿಯೂ ಪ್ರಮುಖ ಮಾರ್ಗಗಳಲ್ಲಿ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.
ಪ್ರಯಾಣಿಕರು ಹೆಚ್ಚುವರಿ ವಿಶೇಷ ಸಾರಿಗೆಗಳ ಸದುಪಯೋಗ ಪಡೆದುಕೊಂಡು ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್‌ಗಳಲ್ಲಿ ಸಂಚರಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮನವಿ ಮಾಡಿದೆ.





