ಉತ್ತರ ಕನ್ನಡ: ಗಣೇಶ ಚತುರ್ಥಿ ಹಬ್ಬವನ್ನು ಜಿಲ್ಲೆಯಲ್ಲಿ ಶಾಂತಿಯುತ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಜ್ಜಾಗಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಡಿಜೆ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗಣೇಶೋತ್ಸವ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಬೇಕು. ಧ್ವನಿವರ್ಧಕ ಬಳಕೆಗೆ ಪೊಲೀಸ್ ಅನುಮತಿ ಕಡ್ಡಾಯವಾಗಿದ್ದು, ವಸತಿ ಪ್ರದೇಶಗಳಲ್ಲಿ 55 ಡೆಸಿಬಲ್ ಹಾಗೂ ಶಾಲೆ, ಆಸ್ಪತ್ರೆ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ 50 ಡೆಸಿಬಲ್ ಶಬ್ದಮಿತಿಯನ್ನು ಪಾಲಿಸಬೇಕು.
ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಲು ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ‘ಏಕಗವಾಕ್ಷಿ’ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1,492 ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ನಡೆಯಲಿದ್ದು, ಮೆರವಣಿಗೆಗಳಿಗೆ ಅಗತ್ಯ ಅನುಮತಿ ಪಡೆಯುವಂತೆ ಸೂಚಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಅಂಕೋಲಾ | ಕಸ್ತೂರಿ ರಂಗನ್ ವರದಿ ಕುರಿತ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸುವಂತೆ ರೈತ ಸಂಘದ ಒತ್ತಾಯ
ವಿಸರ್ಜನಾ ಸ್ಥಳಗಳಲ್ಲಿ ಜೆಸಿಬಿ, ಅಗ್ನಿಶಾಮಕ ದಳ, ಹೆಸ್ಕಾಂ ಸಿಬ್ಬಂದಿ ಹಾಗೂ ಪರಿಣಿತ ಈಜುಗಾರರನ್ನು ನಿಯೋಜಿಸಲಾಗುವುದು. ಜಿಲ್ಲೆಯ 50ಕ್ಕೂ ಹೆಚ್ಚು ಅಧಿಕೃತ ಸ್ಥಳಗಳಲ್ಲಿ ಪಟಾಕಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹಸಿರು ಪಟಾಕಿಗಳನ್ನೇ ಖರೀದಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.
ಬಿಗಿ ಪೊಲೀಸ್ ಬಂದೋಬಸ್ತ್: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ಗಣೇಶೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಬಂದೋಬಸ್ತ್ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಕಳೆದ ಗಣೇಶೋತ್ಸವ ಹಾಗೂ ಮೆರವಣಿಗೆ ವೇಳೆ ಗಲಾಟೆ, ಅಶಾಂತಿ ಸೃಷ್ಟಿಸಿದ್ದ ಆರೋಪಿಗಳ ವಿರುದ್ಧ ಬಿಎನ್‌ಎಸ್ ಕಾಯ್ದೆಯಡಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಬಾಂಡ್ ಓವರ್ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಶೇ.95ರಷ್ಟು ಗಣೇಶ ಮೂರ್ತಿಗಳು 11ನೇ ದಿನದೊಳಗೆ ವಿಸರ್ಜನೆಯಾಗಲಿದ್ದು, ಹೆಚ್ಚುವರಿ ಭದ್ರತೆಗಾಗಿ 400 ಗೃಹರಕ್ಷಕರು, 15 ಡಿಎಆರ್ ಹಾಗೂ ಕೆಎಸ್‌ಆರ್‌ಪಿ ತುಕಡಿಗಳನ್ನು ಅಗತ್ಯವಿರುವ ಸ್ಥಳಗಳಲ್ಲಿ ನಿಯೋಜಿಸಲಾಗುವುದು ಎಂದರು.
ಶಬ್ದಮಿತಿ ಉಲ್ಲಂಘನೆ ಕುರಿತು ದೂರು ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿಯೊಂದಿಗೆ ಧ್ವನಿವರ್ಧಕಗಳ ಶಬ್ದಮಿತಿಯನ್ನು ಪರಿಶೀಲಿಸಲಾಗುವುದು. ತುರ್ತು ಸಂದರ್ಭಗಳಿಗಾಗಿ ಅಗ್ನಿಶಾಮಕ ಮತ್ತು ವೈದ್ಯಕೀಯ ಸಿಬ್ಬಂದಿ ಒಳಗೊಂಡ ಕ್ವಿಕ್ ರೆಸ್ಪಾನ್ಸ್ ಟೀಮ್‌ಗಳನ್ನು ಸಜ್ಜುಗೊಳಿಸಲಾಗುವುದು ಎಂದು ಎಸ್ಪಿ ತಿಳಿಸಿದರು.
ಸಭೆಯಲ್ಲಿ ಕಾರವಾರ ಉಪವಿಭಾಗಾಧಿಕಾರಿ ರಮ್ಯಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಭಟ್ಕಳ ವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾನು ಗುಪ್ತ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ತಾಲೂಕುಗಳ ಸಾರ್ವಜನಿಕರು ಉಪಸ್ಥಿತರಿದ್ದರು.





