ಮೈಸೂರು ಜಿಲ್ಲೆ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ₹419.78 ಕೋಟಿ ವೆಚ್ಚದ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯನವರು ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿ, ಪಿರಿಯಾಪಟ್ಟಣದ ಶಕ್ತಿ ದೇವತೆಯಾದ ಮಸಣಿಕಮ್ಮ ದೇವಾಲಯ ನಿರ್ಮಾಣ, ತಾಲ್ಲೂಕು ಒಕ್ಕಲಿಗರ ಸಂಘದ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಕುವೆಂಪು ಭವನ, ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಅಭಿವೃದ್ಧಿ ಕಾರ್ಯಕ್ರಮಗಳು ಸರ್ಕಾರ ನುಡಿದಂತೆ ನಡೆದುಕೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟರು. 2014ರಲ್ಲಿ ನೀಡಿದ್ದ 168 ಭರವಸೆಗಳಲ್ಲಿ 158 ಅನ್ನು ಈಡೇರಿಸಿದ್ದು, ಜೊತೆಗೆ 20 ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪ್ರಸ್ತುತ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಲ್ಲಿದ್ದು, ಇತರ ರಾಜ್ಯಗಳು ಕೂಡ ಅವುಗಳನ್ನು ಅನುಸರಿಸುತ್ತಿವೆ ರಾಜ್ಯ ಸರ್ಕಾರ ₹4,48,004 ಕೋಟಿ ವೆಚ್ಚದ ಬಜೆಟ್ ಮಂಡಿಸಿದ್ದು, ಆರ್ಥಿಕವಾಗಿ ಸದೃಢವಾಗಿದೆ. ಜನರ ಬೆಂಬಲ ಸರ್ಕಾರದೊಂದಿಗೆ ಇದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಕೆರೆ ತುಂಬಿಸುವ ಯೋಜನೆಗಳಿಂದ ಪಿರಿಯಾಪಟ್ಟಣ ತಾಲೂಕಿನಲ್ಲಿ ಅಂತರ್ಜಲ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ ಎಂದರು. ದಶಕಗಳಿಂದ ಬಾಕಿ ಉಳಿದಿದ್ದ ಭೂ ದಾಖಲೆ ಸಮಸ್ಯೆಗಳನ್ನು ಪರಿಹರಿಸಿ ಪೌತಿ ಖಾತೆಗಳನ್ನು ನೀಡಲಾಗುತ್ತಿದೆ. ಜೊತೆಗೆ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಕೃಷಿ ಇಲಾಖೆಯಿಂದ ರಾಜ್ಯಾದ್ಯಂತ ₹3,000 ಕೋಟಿ ವೆಚ್ಚದಲ್ಲಿ ರೈತರಿಗೆ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದ್ದು, ಪಂಪ್ ಸೆಟ್ಗಳಿಗೆ 7 ಗಂಟೆಗಳ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ಸೋಲಾರ್ ಪಂಪ್ ಅಳವಡಿಕೆಗೆ ಸಹಾಯಧನ ನೀಡಲಾಗುತ್ತಿದೆ. ತಾಲೂಕಿನಲ್ಲಿ 63 ಮೆಗಾವಾಟ್ ಸಾಮರ್ಥ್ಯದ ಎರಡು ಸೌರ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಮಾತನಾಡಿ, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಈಗ ಚಾಲನೆ ದೊರೆತಿದೆ. ಪಿರಿಯಾಪಟ್ಟಣ ತಾಲೂಕಿನಲ್ಲಿ ನೀರಾವರಿ ಕೊರತೆ ಇರುವುದರಿಂದ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಯಲ್ಲಿದ್ದು, ಜೂನ್ ವೇಳೆಗೆ ಕಾರ್ಯ ಪೂರ್ಣಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮಸಣಿಕಮ್ಮ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಸರ್ಕಾರ ಬಡವರು, ರೈತರು ಹಾಗೂ ಅಭಿವೃದ್ಧಿಗೆ ಸದಾ ಬದ್ಧವಾಗಿದೆ. ಐದು ಗ್ಯಾರೆಂಟಿ ಯೋಜನೆಗಳಿಗೆ ವರ್ಷಕ್ಕೆ ₹58 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಜನರ ಜೀವನಮಟ್ಟ ಸುಧಾರಿಸಿದೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ?ಗುಂಡ್ಲುಪೇಟೆ |110 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕೃಷಿ ಸಚಿವ ಚಲುವರಾಯಸ್ವಾಮಿ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಶಾಸಕರು ಮತ್ತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದ್ದರು.





