ದೆಹಲಿಯ ಜಂತರ್ ಮಂತರ್‌ನಲ್ಲಿ ನ್ಯಾಯಕ್ಕಾಗಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕೇಂದ್ರ ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟ, ಜಿಲ್ಲಾ ಶಾಖೆ ಯಾದಗಿರಿ ವತಿಯಿಂದ ಶುಕ್ರವಾರ ಪಂಜಿನ ಪ್ರತಿಭಟನೆ ನಡೆಸಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಬಳಿಕ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಹಾಗೂ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಮರೆಪ್ಪ ಚಟ್ಟೇಕರ್, ‘ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ’ ಎಂದು ಹೇಳಿದರು.
‘ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವ ಹೊಣೆ ಕೇಂದ್ರ ಸರ್ಕಾರದ ಮೇಲಿದೆ. ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಕೇಂದ್ರ ಗೃಹ ಸಚಿವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ದೆಹಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ಪ್ರತಿಭಟನೆಯಲ್ಲಿ ಸೈದಾಪ್ಪ ಕೊಲ್ಲೂರು, ಗೋಪಾಲ್, ಮೊಹಮ್ಮದ್ ಸಲೀಂ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.





