ಪಾವಗಡ ತಾಲೂಕಿನ ವ್ಯಾಪ್ತಿಯಲ್ಲಿರುವ ಹಲವು ಗ್ರಾಮ ಪಂಚಾಯತಿಗಳಲ್ಲಿ ‘ಪಿಡಿಒ’ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬಿಜೆಪಿಗರು ಆರೋಪಿಸಿದ್ದಾರೆ. ಪಾವಗಡ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾ ಅಧಿಕಾರಿ ಜಾನಕಿರಾಂ ಅವರಿಗೆ ದೂರು ಸಲ್ಲಿಸಿದ್ದಾರೆ.
ಪಾವಗಡದ ಕಸಬಾ ಹೋಬಳಿಯಲ್ಲಿರುವ ಗ್ರಾಮ ಪಂಚಾಯತಿಗಳ ಪಿಡಿಒಗಳು ಒಂದು ಪಕ್ಷದ (ಕಾಂಗ್ರೆಸ್) ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.
ಪಿಡಿಒಗಳು ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದ್ದಾರೆ. ಅವರಿಗೆ ಇಷ್ಟಬಂದಂತೆ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಯಾವುದೇ ಗ್ರಾಮ ಸಭೆಗಳನ್ನು ನಡೆಸುತ್ತಿಲ್ಲ. ಗ್ರಾಮ ಸಭೆಗಳು ನಡೆದು ಸುಮಾರು 2 ವರ್ಷಗಳೇ ಕಳೆದುಹೋಗಿವೆ ಎಂದು ಆರೋಪಿಸಿದ್ದಾರೆ.
ದೂರು ಸಲ್ಲಿಸುವ ವೇಳೆ ಬಿಜೆಪಿ ಪದಾಧಿಕಾರಿಗಳಾದ ಅಶೋಕ್, ಮುರಳಿ, ಗೋಲ್ಡನ್ ಮಂಜು, ಬಜರಂಗದಳದ ಸುಮನ್ ಇದ್ದರು.