ಕೆಜಿಎಫ್ : ತಾಲೂಕಿನಾದ್ಯಂತ ಸಂಜೆ ಸುರಿದ ಭಾರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯ ಪರಿಣಾಮ ಮುಳಬಾಗಿಲು ಅಲ್ಲಿ ಮಾರ್ಗ ಮಧ್ಯದಲ್ಲಿ ಬೃಹತ್ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದು ಮುಖ್ಯ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಎರಡು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡು ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡ ಘಟನೆ ನಡೆದಿದೆ.
ಸುಮಾರು ಒಂದರಿಂದ ಎರಡು ಗಂಟೆಗಳ ಕಾಲ ನಿರಂತರವಾಗಿ ಸುರಿದ ಗಾಳಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ನೀಲಗಿರಿ ಮರಗಳು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು.
ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ಕೆಲಕಾಲ ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.
ಭಾರಿ ಗಾಳಿಯ ತೀವ್ರತೆಗೆ ಮರಗಳು ಬುಡಸಹಿತ ನೆಲಕ್ಕುರುಳಿದ ಪರಿಣಾಮ ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಅದೃಷ್ಟವಶಾತ್ ಮರಗಳು ಬೀಳುವ ಸಮಯದಲ್ಲಿ ಯಾವುದೇ ವಾಹನಗಳು ಅಥವಾ ಸಾರ್ವಜನಿಕರು ಅದರ ಕೆಳಗೆ ಸಿಲುಕದ ಕಾರಣ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಯಿತು.
ಘಟನೆ ಕುರಿತು ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಬೇತಮಂಗಲ ಪೊಲೀಸ್ ಠಾಣೆಯ ಪಿಎಸ್ಐ ತ್ಯಾಗರಾಜ್ ಅವರ ನೇತೃತ್ವದಲ್ಲಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.
ಉಪ ವಲಯ ಅರಣ್ಯ ಅಧಿಕಾರಿ ಪ್ರಕಾಶ್ ಅವರ ಸಮ್ಮುಖದಲ್ಲಿ ಜೆಸಿಬಿ ಮತ್ತು ಕಟರ್ ಯಂತ್ರಗಳ ಸಹಾಯದಿಂದ ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ಬೃಹತ್ ಮರಗಳನ್ನು ತೆರವುಗೊಳಿಸಿ ವಾಹನ ಸಂಚಾರವನ್ನು ಪುನಃ ಆರಂಭಗೊಳಿಸಲಾಯಿತು.
ಇನ್ನೊಂದೆಡೆ, ಭಾರಿ ಗಾಳಿ ಮಳೆಯಿಂದ ಹಲವು ಕಡೆಗಳಲ್ಲಿ ಕೆಇಬಿ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು ವಿಧ್ಯುತ್ ಸ್ಥಗಿತಗೊಂಡಿದೆ. ಇದರಿಂದ ಬೇತಮಂಗಲ ಸಮೀಪದ ಗುಟ್ಟಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ರಾತ್ರಿ ವೇಳೆ ಜನರು ಕತ್ತಲಿನಲ್ಲಿ ಕಾಲ ಕಳೆಯುವಂತಾಗಿದೆ. ಹಲವೆಡೆ ಟ್ರಾನ್ಸ್ಫಾರ್ಮರ್ಗಳು ಹಾಗೂ ವಿದ್ಯುತ್ ತಂತಿಗಳಿಗೆ ಹಾನಿಯಾಗಿರುವ ಶಂಕೆಯೂ ವ್ಯಕ್ತವಾಗಿದೆ.
ಇದನ್ನು ಓದಿದ್ದೀರಾ..? ಕೋಲಾರ | ಕಾರ್ಮಿಕರ ಕನಿಷ್ಠ ವೇತನ 35 ಸಾವಿರಕ್ಕಾಗಿ ಸಿಐಟಿಯು ನೇತೃತ್ವದಲ್ಲಿ ಡಿಸಿ ಕಛೇರಿ ಮುಂದೆ ಪ್ರತಿಭಟನೆ – ಈ ದಿನ.ಕಾಮ್
ಸ್ಥಳೀಯ ನಿವಾಸಿಗಳು ಮಾತನಾಡಿ, “ಭಾರಿ ಗಾಳಿ ಮತ್ತು ಆಲಿಕಲ್ಲು ಮಳೆಯಿಂದ ಮರಗಳು ನೆಲಕ್ಕುರುಳಿದ್ದು, ವಿದ್ಯುತ್ ಕಂಬಗಳೂ ಹಾನಿಗೊಳಗಾಗಿವೆ. ಕೆಇಬಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ವಿದ್ಯುತ್ ಸರಬರಾಜು ಪುನಃ ಕಲ್ಪಿಸಬೇಕು” ಎಂದು ಆಗ್ರಹಿಸಿದರು.




