ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ನಡೆ ಖಂಡಿಸಿ ರಾಜ್ಯಪಾಲರ ವಾಪಸಾತಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಶಾಖೆಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಛೇರಿವರೆಗೆ ತೆರಳಿ ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸಲ್ಲಿಸಿದರು.
ʼಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಅಸ್ಥಿರತೆಗೊಳಿಸಬೇಕೆಂಬ ಉದ್ದೇಶದಿಂದ ಬಿಜೆಪಿ-ಜೆಡಿಎಸ್ ಪಕ್ಷಗಳು ರಾಜ್ಯಪಾಲರ ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿವೆ. ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ಪ್ರಜಾಪ್ರಭುತ್ವದ ಮೂಲಭೂತ ತತ್ವಕ್ಕೆ ಹಾಗೂ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ಬರುತ್ತದೆʼ ಎಂದು ಕಿಡಿಕಾರಿದರು.
ರಾಜ್ಯಪಾಲರು ಸಾಂವಿಧಾನಿಕ ಪ್ರತಿನಿಧಿಯಾಗಿ ಕೆಲಸ ಮಾಡುವ ಬದಲು ಕೇಂದ್ರ ಬಿಜೆಪಿ ಸರ್ಕಾರದ ಅಣತಿಯಂತೆ ನಡೆದುಕೊಂಡಿದ್ದಾರೆ. ಭ್ರಷ್ಟಚಾರ ನಿಯಂತ್ರಣ ಕಾಯಿದೆ 17-ಎ ಅಡಿ ಅನುಮತಿ ನೀಡುವ ವೇಳೆ ಪಾಲಿಸಬೇಕಾಗಿರುವ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಸಂವಿಧಾನದ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕು. ಅದನ್ನು ಬಿಟ್ಟು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ಪಕ್ಷದ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುವುದು ಅಕ್ಷಮ್ಯವಾಗಿದೆʼ ಎಂದು ಖಂಡಿಸಿದರು.
ಬಹುಮತದಿಂದ ರಚನೆಯಾಗಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸಿಕೊಳ್ಳುತ್ತಿದೆ. ರಾಷ್ಟ್ರಪತಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು. ಬಹುಮತದ ರಾಜ್ಯ ಕಾಂಗ್ರೆಸ್ ಪಕ್ಷದ ನೇತ್ರತ್ವದ ಸರ್ಕಾರ ಸುಗಮವಾಗಿ ನಡೆಯಲು ಸೂಕ್ತ ಕ್ರಮ ಜರುಗಿಸಬೇಕುʼ ಎಂದು ಆಗ್ರಹಿಸಿದರು.
ʼಜನತಂತ್ರ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿರುವ ಬಿಜೆಪಿ ಹಾಗೂ ಜೆಡಿಎಸ್ ನಡೆಯನ್ನು ಖಂಡಿಸಿ. ಶೋಷಿತರ ದನಿಯಾಗಿ ಜನಪರ ಆಡಳಿತ ನಡೆಸುವ ಸಿಎಂ ಸಿದ್ಧರಾಮಯ್ಯ ಸರ್ಕಾರವನ್ನು ಸಂಪೂರ್ಣವಾಗಿ ಬೆಂಬಲಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕದಸಂಸ ಪ್ರತಿಭಟನೆ ನಡೆಸಿದೆʼ ಎಂದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಉದ್ಘಾಟನೆಯಾಗಿ ವರ್ಷ ಕಳೆದರೂ ಉಪಯೋಗಕ್ಕಿಲ್ಲದ ʼಬಸ್ ನಿಲ್ದಾಣʼ
ಪ್ರತಿಭಟನೆಯಲ್ಲಿ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಜಿಲ್ಲಾ ಸಂಘಟನಾ ಸಂಚಾಲಕ ಅಶೋಕ ಗಾಯಕವಾಡ, ಜಿಲ್ಲಾ ಸಂಚಾಲಕ ಅರುಣ ಪಟೇಲ್, ಎಂ.ಎಸ್.ಮನೋಹರ್, ರಮೇಶ ಉಮಾಪುರೆ, ರಾಜಕುಮಾರ ವಾಘಮಾರೆ, ಶಿವರಾಜ ತಡಪಳ್ಳಿ , ವಾಮನ ಮೈಸಲಗೆ, ರಮೇಶ ಬೆಲ್ದಾರ್, ಸತೀಶ ರತ್ನಾಕರ್, ಝರೆಪ್ಪಾ ವರ್ಮಾ, ಶಿರೋಮಣಿ ಹಲಗೆ , ಬಸವರಾಜ ಭಾವಿದೊಡ್ಡಿ , ರಾಹುಲ ಹಾಲಹಿಪ್ಪರ್ಗಾ, ವಿಜಯಕುಮಾರ ಭಾವಿಕಟ್ಟಿ, ಶಿವಕುಮಾರ ಗುನ್ನಳ್ಳಿ, ಗೌತಮ ಮುತ್ತಂಗಿಕರ್, ಜೈಭೀಮ ಚಿಮ್ಮನಾಯಕ, ಅಬ್ದುಲ್ ಮನ್ನಾನ್ ಸೇಠ್, ಸಂತೋಷ ಜೋಳದಾಬಕೆ, ವಿಠಲದಾಸ ಪ್ಯಾಗೆ ಸೇರಿದಂತೆ ಅನೇಕರಿದ್ದರು.