ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಚಾರ್ಜ್‌ಶೀಟ್ ಮೇಲಿನ ವಿಚಾರಣೆಗೆ ಬೆಂಗಳೂರಿನ 1ನೇ ತ್ವರಿತ ನ್ಯಾಯಾಲಯ ಸಮ್ಮತಿ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಆರೋಪಿ ಯಡಿಯೂರಪ್ಪಗೆ ಸಮನ್ಸ್ ಜಾರಿ ಮಾಡಿದೆ.
ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆ ಮತ್ತು ಆಕೆಯ ತಾಯಿ ನ್ಯಾಯ ಪಡೆಯಲು ಸಹಾಯ ಮಾಡುವಂತೆ ಮನವಿ ಮಾಡಲು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ, ಸಂತ್ರಸ್ತ ಬಾಲಕಿಯನ್ನು ಪ್ರತ್ಯೇಕ ಕೊಠಡಿಗೆ ಕರೆದೊಯ್ದಿದ್ದ ಯಡಿಯೂರಪ್ಪ, ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಲಾಗಿದೆ.
ಬಳಿಕ, ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ದೂರು ಸಲ್ಲಿಸಿದ್ದರು. ತನಿಖೆ ವೇಳೆ, ಸಂತ್ರಸ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆಯೋ ಇಲ್ಲವೋ ಎಂಬುದನ್ನು ಪರೀಕ್ಷಿಸಲು ಸಂತ್ರಸ್ತೆಯ ಖಾಸಗಿ ಭಾಗ ಸ್ಪರ್ಶಿಸಿದ್ದೆ ಎಂದು ಯಡಿಯೂರಪ್ಪ ಒಪ್ಪಿಕೊಂಡಿದ್ದರು ಎಂದು ತಿಳಿದುಬಂದಿದೆ.
ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಜಾರ್ಜ್‌ಶೀಟ್ ಸಲ್ಲಿಸಿದ್ದರು. ಈ ನಡುವೆ, ತಮ್ಮ ವಿರುದ್ಧ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಪ್ರಕರಣ ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದ ಕೋರ್ಟ್, ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಇದೀಗ, ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಬೆಂಗಳೂರಿನ 1ನೇ ತ್ವರಿತ ನ್ಯಾಯಲಯವು ಯಡಿಯೂರಪ್ಪಗೆ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 15ರಂದು ಖುದ್ದಾಗಿ ನ್ಯಾಯಾಲಯದ ಎದುರು ಹಾಜರಾಗುವಂತೆ ಸೂಚನೆ ನೀಡಿದೆ.