ಸಾರ್ವತ್ರಿಕ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷವೊಂದರ ಪರವಾಗಿ ಪ್ರಚಾರ ಕೈಗೊಂಡಿದ್ದ ಔರಾದ ತಾಲೂಕಿನ ತಹಸೀಲ್ ಕಚೇರಿಯಲ್ಲಿ ಆಹಾರ ಶಿರಸ್ತೇದಾರ ಆಗಿ ಕೆಲಸ ನಿರ್ವಹಿಸುತ್ತಿದ್ದ ರವಿ ಸೂರ್ಯವಂಶಿ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಗೋವಿಂದರೆಡ್ಡಿ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ನೌಕರನಾಗಿ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷವೊಂದರ ಪರವಾಗಿ ಪ್ರಚಾರ ಮಾಡುತ್ತಿರುವುದು ನಿಯಮಬಾಹಿರ. ಈ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸದರಿಯವರು ಸ್ಪಷ್ಟಿಕರಣ ಕೇಳಲಾಗಿತ್ತು. ಅವರು ನೀಡಿದ ಸ್ಪಷ್ಟಿಕರಣದಲ್ಲಿ ಸದರಿಯವರು ರಾಜಕೀಯ ಪಕ್ಷವೊಂದರ ಪರವಾಗಿ ಒಲವು ಹೊಂದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಆದೇಶಿಸಿದ್ದಾರೆ.
ಕರ್ನಾಟಕ ನಾಗರೀಕ ಸೇವಾ (ವರ್ಗಿಕರಣ, ನಿಯಂತ್ರಣ ಹಾಗೂ ಮೇಲ್ಮನವಿ) ನಿಯಮಗಳು 1957ರ ನಿಯಮ 10(1) (ಡಿ) ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ನಿಯಮಗಳ ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ಆಹಾರ ಶಿರಸ್ತೇದಾರ ರವಿ ಸೂರ್ಯವಂಶಿ ಅವರನ್ನು ಅಮಾನತು ಮಾಡಲಾಗಿದೆ. ಕೇಂದ್ರ ಸ್ಥಾನ ಬಿಡತಕ್ಕದಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.