2024ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರೊ. ಜಿ.ಬಿ. ಶಿವರಾಜು ಆಯ್ಕೆ

Date:

Advertisements

ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗಳು ಆಯ್ಕೆಯಾಗಿವೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಾವಲಂಬನೆ, ಗ್ರಾಮಸ್ವರಾಜ್, ಅಸ್ಪೃಶ್ಯತೆ ನಿವಾರಣೆ, ಆರ್ಥಿಕ ಚಿಂತನೆಗಳು, ಖಾದಿ ಚಟುವಟಿಕೆ, ಜೀವನ ಶಿಕ್ಷಣ ಮತ್ತಿತರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಮಹತ್ಸಾಧನೆ ಮಾಡಿದ ಮಹನೀಯರು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ಗೌರವಿಸಲು ಕರ್ನಾಟಕ ರಾಜ್ಯ ಸರ್ಕಾರವು 2014 ರಲ್ಲಿ ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ಸ್ಥಾಪಿಸಿ ಆದೇಶ ಹೊರಡಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಶಸ್ತಿ ಫಲಕ ಹಾಗೂ ರೂ.5 ಲಕ್ಷ ನಗದು ಒಳಗೊಂಡಿರುವ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು 2014 ರಿಂದ ಪ್ರದಾನ ಮಾಡುತ್ತಾ ಬಂದಿದೆ. 2023ರ ವರೆಗೆ 8 ವ್ಯಕ್ತಿಗಳು ಹಾಗೂ 2 ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Advertisements

2024ನೇ ಸಾಲಿನ ಪ್ರಶಸ್ತಿಯು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ಗೊಟ್ಟಿಕೆರೆಯ ಪ್ರೊ. ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ಸಂಸ್ಥೆಗೆ ವಿಂಗಡಿಸಿ ಪ್ರದಾನ ಮಾಡಲಾಗುತ್ತಿದೆ.

ಪ್ರಶಸ್ತಿ ಮೊತ್ತವನ್ನು ತಲಾ ರೂ.2.5 ಲಕ್ಷಗಳಂತೆ ಸಮನಾಗಿ ಪುರಸ್ಕಾರ ನೀಡಿ ಸ್ಮರಣಿಕೆ, ಪ್ರಶಸ್ತಿ ಪತ್ರದೊಂದಿಗೆ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾದ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತ ಸನತ್‍ಕುಮಾರ್ ಬೆಳಗಲಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ವೂಡೆ ಪಿ.ಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ಸದಸ್ಯರಾಗಿದ್ದರು.

ಪ್ರೊ. ಜಿ.ಬಿ. ಶಿವರಾಜು ಪರಿಚಯ

ನಿವೃತ್ತ ಉಪನ್ಯಾಸಕರಾಗಿರುವ ಪ್ರೊ. ಜಿ.ಬಿ. ಶಿವರಾಜು ಅವರು ವೃತ್ತಿ ಜೀವನದುದ್ದಕ್ಕೂ ವಿದ್ಯಾರ್ಥಿಗಳಲ್ಲಿ ಗಾಂಧಿ ವಿಚಾರಧಾರೆಯನ್ನು ರೂಪಿಸಲು ಶ್ರಮಿಸಿದ್ದಾರೆ.

73 ವರ್ಷದ ಇವರು ತಮ್ಮ ನಿವೃತ್ತಿ ವೇತನವನ್ನು ಗಾಂಧೀ ವಿಚಾರಗಳನ್ನು ಯುವ ಜನರಿಗೆ ತಲುಪಿಸಲು ವಿನಿಯೋಗಿಸುತ್ತಿದ್ದಾರೆ. ಗಾಂಧಿ ಪ್ರಣೀತ ಸಂಘ ಸಂಸ್ಥೆಗಳು ಮತ್ತು ಸರ್ಕಾರಿ ಸಂಸ್ಥೆಗಳು, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಮದ್ಯಪಾನ ಸಂಯಮ ಮಂಡಳಿಗಳ ಸಮನ್ವಯದ ಮೂಲಕ ಗಾಂಧಿ ವಿಚಾರಗಳನ್ನು ವಿದ್ಯಾರ್ಥಿಗಳು ಮತ್ತು ಯುವ ಸಮುದಾಯಕ್ಕೆ ತಲುಪಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ.

ಪ್ರಶಸ್ತಿ 1
ಪ್ರೊ. ಜಿ.ಬಿ. ಶಿವರಾಜು

ಅರಸೀಕೆರೆಯಲ್ಲಿನ ಕಸ್ತೂರ ಬಾ ಗಾಂಧಿ ಆಶ್ರಮದ ಪುನರುಜ್ಜೀವನಗೊಳಿಸಿದ್ದಾರೆ. ಮೂಡಿಗೆರೆಯ ಭಾರತಿ ಬೈಲ್ ಕೇಂದ್ರವನ್ನು ಅಭಿವೃದ್ಧಿಗೊಳಿಸಿದ್ದಾರೆ. ಮಂಡ್ಯ ಜಿಲ್ಲೆ ಮಾರ್ನೋಮಿದೊಡ್ಡಿ ಗ್ರಾಮದಲ್ಲಿ ಕಸ್ತೂರಬಾ ಗಾಂಧಿ ಟ್ರಸ್ಟ್‌ನ ಉಪಕೇಂದ್ರವನ್ನು ಸ್ಥಳೀಯರ ಸಹಕಾರದಿಂದ ಗ್ರಾಮೀಣ ಮಹಿಳೆಯರ ಸ್ವ ಉದ್ಯೋಗ ಕಾರ್ಯಾಗಾರವಾಗಿ ಅಭಿವೃದ್ಧಿಪಡಿಸಿದ್ದಾರೆ. ಸಂಸ್ಥೆಯ 20 ಎಕರೆಗೂ ಹೆಚ್ಚು ಭೂಮಿಯಲ್ಲಿ ಸುಸ್ಥಿರ ಕೃಷಿ ಚಟುವಟಿಕೆಗಳನ್ನು ಸ್ಥಳೀಯರ ಸಹಕಾರದೊಂದಿಗೆ ನಿರ್ವಹಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ‘ಈ ದಿನ’ ಫಲಶೃತಿ | ಅನೈತಿಕ ಚಟುವಟಿಕೆಗಳ ತಾಣವಾಗಿದ್ದ ರೋಣ ‘ಇಂದಿರಾ ಕ್ಯಾಂಟೀನ್’ ಸ್ವಚ್ಫಗೊಳಿಸಿದ ಪುರಸಭೆ

ಮೈಸೂರಿನ ಮಾನಸಗಂಗೋತ್ರಿಯಲ್ಲಿ ಸಬರಮತಿ ಮಾದರಿಯ ಆಶ್ರಮ ನಿರ್ಮಾಣ, ಗದಗ ಜಿಲ್ಲೆಯಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ವಿಶ್ವವಿದ್ಯಾಲಯದ ಆವರಣದಲ್ಲಿ ಸಬರಮತಿ ಆಶ್ರಮದ ಮಾದರಿಯನ್ನು ನಿರ್ಮಿಸಿ ಗಾಂಧೀಜಿಯವರ ಬದುಕು ಸಾಧನೆಗಳನ್ನು ಯುವಜನರು ಹಾಗೂ ಗ್ರಾಮೀಣ ಭಾಗದ ಜನರಿಗೆ ಆಕರ್ಷಕವಾಗಿ ಅನಾವರಣಗೊಳಿಸಿದ್ದಾರೆ. ಗಾಂಧೀ ಸಾಹಿತ್ಯ ಸಂಘ, ಹರಿಜನ ಸೇವಕ ಸಂಘ ಮೊದಲಾದ ಸಂಸ್ಥೆಗಳನ್ನು ಪುನರುಜ್ಜೀವಗೊಳಿಸಿದ್ದಾರೆ.

ಹಾವೇರಿ: ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಯ ಹಿನ್ನೆಲೆ

1984ರ ಅಕ್ಟೋಬರ್ 2ರಂದು ಹಾವೇರಿ ಜಿಲ್ಲೆ ಹೊಸರಿತ್ತಿ ಗ್ರಾಮದಲ್ಲಿ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನವು ಸ್ಥಾಪಿಸಿದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಯು ಕಳೆದ 39 ವರ್ಷಗಳಿಂದ ಗಾಂಧಿ ವಿಚಾರಗಳನ್ನು ಹೊಸ ಪೀಳಿಗೆಯಲ್ಲಿ ಅಳವಡಿಸಲು ಅಹರ್ನಿಶಿ ದುಡಿಯುತ್ತಿದೆ.

WhatsApp Image 2024 09 26 at 5.41.08 PM

ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ 5 ರಿಂದ 10 ನೇ ತರಗತಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಸಮಾಜದ ಎಲ್ಲ ವರ್ಗಗಳು ಸೇರಿದಂತೆ ಗ್ರಾಮೀಣ ಕೃಷಿಕ ಹಾಗೂ ಕೂಲಿಕಾರರ ಕುಟುಂಬದ ಹಿನ್ನೆಲೆಯ ಸಾವಿರಾರು ಪ್ರತಿಭಾವಂತ ಮಕ್ಕಳಿಗೆ ಊಟ, ವಸತಿ, ಇತರೆ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ.

ಇಲ್ಲಿನ ವಿದ್ಯಾರ್ಥಿಗಳು ತಾವೇ ನೇಯ್ದ ಬಟ್ಟೆಗಳನ್ನು ಧರಿಸುತ್ತಾರೆ. ತಾವೇ ಬೆಳೆದ ಕೃಷಿ ಬೆಳೆಗಳಿಂದ ತಯಾರಿಸಿದ ಆಹಾರ ಸೇವಿಸುತ್ತಾರೆ. ದೇಶದ ಆಂತರಿಕ ಕಲಹಗಳನ್ನು ಕಿತ್ತೆಸೆಯುವ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಶಿಕ್ಷಣ ಪಡೆಯುತ್ತಿದ್ದಾರೆ. ರಾಜ್ಯ ಪಠ್ಯಕ್ರಮದ ಜೊತೆಗೆ ಗಾಂಧೀ ವಿಚಾರಧಾರೆಯ ಅನುಸಾರ ಕೃಷಿ, ನೂಲು ಮತ್ತು ನೇಯ್ಗೆ, ಹೈನುಗಾರಿಕೆ, ತೋಟಗಾರಿಕೆ ಮುಂತಾದ ಸ್ವಾವಲಂಬಿ, ಪ್ರಾಯೋಗಿಕ ಶಿಕ್ಷಣವನ್ನು ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇಲ್ಲಿ ಶಿಕ್ಷಣ ಪಡೆದ ಹಲವಾರು ವಿದ್ಯಾರ್ಥಿಗಳು ಅತ್ಯುತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಸಂಸ್ಥೆಯು ಶಿಕ್ಷಣದ ಜೊತೆಗೆ ಜೀವನ ಶಿಕ್ಷಣ ನೀಡುತ್ತಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಅಕ್ಟೋಬರ್ 2ರಂದು ಸಂಜೆ 4.30 ಗಂಟೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಸೌಧದ ಸುಲೋಚನಾ ಸಭಾಂಗಣದಲ್ಲಿ ಜರುಗಲಿದೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.

WhatsApp Image 2024 09 26 at 5.40.10 PM
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X