ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ್ ಭಟ್‌ನನ್ನು ಬಂಧಿಸುವಂತೆ ಆಗ್ರಹಿಸಿ, ರಾಜ್ಯ ಸರ್ಕಾರದ ಬೇಜವಾಬ್ದಾರಿ ಧೋರಣೆಯನ್ನು ಖಂಡಿಸಿ ಪ್ರಗತಿಪರ ಚಿಂತಕರು ಮತ್ತು ಹೋರಾಟಗಾರರು ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶುಕ್ರವಾರ (ಇಂದು) ಸಂಜೆ 4 ಗಂಟೆಗೆ ಜನಾಕ್ರೋಶ ಪ್ರತಿಭಟನೆ ನಡೆಯಲಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಭಾನುವಾರ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್, “ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ” ಎಂದು ಹೇಳಿದ್ದರು. ಮುಸ್ಲಿಮ್ ಮಹಿಳೆಯರ ಕುರಿತು ಆತನ ಅವಹೇಳನಕಾರಿ ಹೇಳಿಕೆ ಶ್ರೀರಂಗಪಟ್ಟಣ ನಗರ ಠಾಣೆಯಲ್ಲಿ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ದೂರು ದಾಖಲಿಸಿದ್ದರು. ಅವರ ದೂರಿನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ರದ್ದು ಕೋರಿ ಕಲ್ಲಡ್ಕ ಪ್ರಭಾಕರ್ ಭಟ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‌ಗೆ ಮಾಹಿತಿ ನೀಡಿರುವ ರಾಜ್ಯ ಸರ್ಕಾರ, “ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆಯ ಬಗ್ಗೆ ತನಿಖೆ ನಡೆಸಲಾಗುವುದು. ಸದ್ಯಕ್ಕೆ ಅವರನ್ನು ನಾವು ಬಂಧಿಸುವುದಿಲ್ಲ” ಎಂದು ಹೇಳಿದೆ.
ಸರ್ಕಾರದ ನಡೆಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನಡೆಯನ್ನು ಖಂಡಿಸಿ, ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ.