ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಲಿಂಗಾಯತ ಉಪ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.
ದಾವಣಗೆರೆಯಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು.
“ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಅನುಷ್ಠಾನ ಮತ್ತು ಲಿಂಗಾಯತ ಉಪ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು” ಎಂದು ಒತ್ತಾಯಿಸಿದರು.
“ಬೆಳಗಾವಿಯಲ್ಲಿ ನಡೆಯುವ ಅಧಿವೇಶನದ ಒಳಗಾಗಿ ಮೀಸಲಾತಿ ವಿಚಾರವನ್ನು ಕೇಂದ್ರಕ್ಕೆ ಶಿಫಾರಸು ಮಾಡಬೇಕು. ಇಲ್ಲದಿದ್ದಲ್ಲಿ, ಅಧಿವೇಶನದ ಒಳಗೇ ಇಷ್ಟಲಿಂಗ ಪೂಜೆ ನಡೆದರೂ ಅಚ್ಚರಿ ಪಡಬೇಕಾಗಿಲ್ಲ” ಎಂದು ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನಾಕಾರರ ಹುಕ್ಕೊತ್ತಾಯ ಸ್ವೀಕರಿಸಿ ಮಾತನಾಡಿದ ಅರಣ್ಯ ಸಚಿವ ಈಶ್ವರ ಖಂಡ್ರೆ, “ಪಂಚಮಸಾಲಿ ಸಮಾಜದ ನ್ಯಾಯಯುತ ಬೇಡಿಕೆ ಕುರಿತು ಮುಖ್ಯಮಂತ್ರಿ ಮತ್ತು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು. ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ಮಾಡಲಾಗುವುದು” ಎಂಬ ಭರವಸೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್ ಸೇರಿದಂತೆ ಹಲವರು ಇದ್ದರು.