ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ ಕಾಲಮಿತಿಯೊಳಗೆ ಮಾಹಿತಿ ನೀಡುವಂತೆ ಸೂಚಿಸಿದರು.
ಸಕಾಲ ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಕಾಲದಲ್ಲಿ ಮಾಹಿತಿ ಒದಗಿಸಬೇಕು. ತಮ್ಮ ಹಂತದಲ್ಲಿ ಕೆಲಸ ಆಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು, ಅದನ್ನು ಹೊರತುಪಡಿಸಿ ಜನರನ್ನು ಸತಾಯಿಸಬಾರದು.
ಸಕಾಲ ಕಾಯ್ದೆಯಡಿ ಸಲ್ಲಿಕೆಯಾದ ಅರ್ಜಿಗಳಿಗೆ ಕಾಲಮಿತಿಯಲ್ಲಿ ಮಾಹಿತಿ ನೀಡದಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಆದ್ದರಿಂದ, ಅಧಿಕಾರಿಗಳು ಸಮಯವನ್ನು ವ್ಯರ್ಥ ಮಾಡದೆ ಕಚೇರಿ ಕೆಲಸವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು.
ಕರ್ತವ್ಯದ ದಿನಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕಚೇರಿ ಕೆಲಸ ಮಾಡಿದ್ದಲ್ಲಿ, ಎಷ್ಟೇ ಒತ್ತಡ ಇದ್ದರೂ ಸಹ ಸಾರ್ವಜನಿಕ ಕೆಲಸಗಳನ್ನು ಪೂರ್ಣಗೊಳಿಸಬಹುದು, ಆ ನಿಟ್ಟಿನಲ್ಲಿ ಇಚ್ಛಾಶಕ್ತಿ ಇರಬೇಕು ಎಂದು ಸಲಹೆ ಮಾಡಿದರು.

ಮೇ ಕೊನೆ ವಾರದಲ್ಲಿ ಜಿಲ್ಲೆಗೆ ಮುಂಗಾರು ಮಳೆ ಪ್ರವೇಶಿಸುವ ಸಾಧ್ಯತೆ ಇದೆ. ಆದ್ದರಿಂದ, ಮುಂಗಾರು ಸಂದರ್ಭದಲ್ಲಿ ಕಳೆದ ಬಾರಿಯಂತೆಯೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ತಂಡವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಸರ್ಕಾರದ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸಬೇಕು. ದಾಖಲಾತಿ ಸರಿಯಾಗಿ ನಿರ್ವಹಣೆ ಮಾಡಬೇಕು. ಮಹಾ ಲೇಖಪಾಲಕರ ಆಡಿಟ್ ಕಂಡಿಕೆಗಳಿಗೆ ಮಾಹಿತಿ ನೀಡಲು ಬಾಕಿ ಇದ್ದು, ಕೂಡಲೇ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು. ಹೊಸ ಆರ್ಥಿಕ ವರ್ಷ ಆರಂಭವಾಗಿದ್ದು, ವಿವಿಧ ಇಲಾಖೆಗಳು ಈಗಿನಿಂದಲೇ ಅಗತ್ಯ ಕಾರ್ಯಕ್ರಮ ರೂಪಿಸಬೇಕು. ಜೊತೆಗೆ ಪ್ರಗತಿ ಸಾಧಿಸಬೇಕು.
ಈ ಸುದ್ದಿ ಓದಿದ್ದೀರಾ? ಮೈಸೂರು | ವ್ಯಸನ ಮುಕ್ತ ಜೀವನಕ್ಕೆ ಆದರ್ಶ ಮೌಲ್ಯಗಳು ಅಡಿಗಲ್ಲಾಗಬೇಕು : ಡಾ. ಜೆ. ಲೋಹಿತ್
ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕವಿತಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿ.ಟಿ.ವಿಸ್ಮಯಿ, ಕಾರ್ಮಿಕ ಅಧಿಕಾರಿ ಕಾವೇರಿ, ತಹಶೀಲ್ದಾರರಾದ ಕಿರಣ್ ಗೌರಯ್ಯ, ಕೃಷ್ಣಮೂರ್ತಿ, ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ಹೇಮಂತ್ ಕುಮಾರ್, ತಾಪಂ.ಇಒಗಳು, ಕೃಷಿ, ಸೆಸ್ಕ್, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಸೇರಿದಂತೆ ಇನ್ನಿತರರು ಇದ್ದರು.