ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಮಕ್ಕಳನ್ನು ದುಡಿಮೆಗೆ ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಕರೆ ಮಾಡಿ ದೂರು ನೀಡಿ ಜಿಲ್ಲಾಧಿಕಾರಿ ಎ ಬಿ ಬಸವರಾಜು ಹೇಳಿದರು.
ಬೆಂ.ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಅಂತಹವರಿಗೆ ಕನಿಷ್ಠ 06 ತಿಂಗಳಿಂದ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಅಥವಾ 20,000 ರೂ. ಗಳಿಂದ 50,000 ರೂಗಳ ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.
ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯ ವೇಳೆ ವಿವಿಧ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಚಿಕನ್ ಮತ್ತು ಮಟನ್ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ, ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜುಗಳಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು, ಆಟೊ ಪ್ರಚಾರ ಕಾರ್ಯಕ್ರಮಗಳನ್ನು, ಬೀದಿ ನಾಟಕಗಳನ್ನು, ಗೋಡೆ ಬರಹಗಳನ್ನು, ಕರಪತ್ರವನ್ನು ಮತ್ತು ಭಿತ್ತಿಪತ್ರಗಳನ್ನು, ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಿ ಎಂದರು.
ಜಿಲ್ಲೆಯಾದ್ಯಂತ ಬಾಲಕಾರ್ಮಿಕರನ್ನು ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಲು ಅನಿರೀಕ್ಷಿತ ತಪಾಸಣೆ ಮತ್ತು ದಾಳಿಗಳನ್ನು ಹೆಚ್ಚಿಸಬೇಕಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ನಿರಂತರವಾಗಿ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಗಳನ್ನು ಕೈಗೊಳ್ಳಬೇಕು. ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ದಾಳಿ ಮಾಡುವ ಸ್ಥಳದ ಮಾಹಿತಿಯನ್ನು ಗೌಪ್ಯವಾಗಿರಿಸಿ ದಾಳಿ ನಡೆಸಬೇಕು. ತಾಲ್ಲೂಕು ಮಟ್ಟದಲ್ಲಿ ಕಾಲಕಾಲಕ್ಕೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮವಹಿಸಿ ಎಂದು ಸಲಹೆ ನೀಡಿದರು.
ಅನಿರೀಕ್ಷಿತ ದಾಳಿ, ತಪಾಸಣೆ ನಡೆಸಿದ ಸಂದರ್ಭದಲ್ಲಿ ರಕ್ಷಿಸಲಾದ ಮಕ್ಕಳಿಗೆ ಸೂಕ್ತ ಪನರ್ವಸತಿ ಕಲ್ಪಿಸಬೇಕು. ಫುಡ್ ಕಿಟ್, ಶೈಕ್ಷಣಿಕ ಕಿಟ್ ಒದಗಿಸಿ ಮುಂದಿನ ವಿದ್ಯಾಭ್ಯಾಸ, ಜೀವನ ರೂಡಿಸಿಕೊಳ್ಳಲು ಕ್ರಮವಹಿಸಬೇಕು.
ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ರಕ್ಷಿಸಲಾದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರ ಮೇಲೆ ಕೂಡಲೇ ದೂರು ದಾಖಲಿಸಿ, ತ್ವರಿತವಾಗಿ ದಂಡ ವಸೂಲಾತಿ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಮಾತನಾಡಿ, ಜಿಲ್ಲೆಯಲ್ಲಿ ಅನಿರೀಕ್ಷಿತ ದಾಳಿ ಹಾಗೂ ತಪಾಸಣೆ ನಡೆಸಿ 2023-24ನೇ ಸಾಲಿನಲ್ಲಿ 13 ಬಾಲಕಾರ್ಮಿಕ ಹಾಗೂ 21 ಕಿಶೋರ ಕಾರ್ಮಿಕರನ್ನು ಸೇರಿ ಒಟ್ಟು 34 ಮಕ್ಕಳನ್ನು ರಕ್ಷಿಸಲಾಗಿದೆ. 2024-25ನೇ ಸಾಲಿನಲ್ಲಿ 03 ಬಾಲ ಕಾರ್ಮಿಕ ಮತ್ತು 33 ಕಿಶೋರ ಕಾರ್ಮಿಕರು ಸೇರಿ ಒಟ್ಟು 36 ಮಕ್ಕಳನ್ನು ರಕ್ಷಿಸಲಾಗಿದೆ. 2024-25 ನೇ ಸಾಲಿನಲ್ಲಿ ಇಲ್ಲಿವರೆಗೆ 06 ಪ್ರಕರಣಗಳಲ್ಲಿ 1,20,000 ರೂಗಳ ದಂಡ ವಸೂಲಾತಿ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಇದನ್ನೂ ಓದಿ : ಈ ದಿನ ಸಂಪಾದಕೀಯ | ಕರ್ನಾಟಕ ಮಾನವೀಯ ಮಾದರಿಯ ತಿರಸ್ಕರಿಸಿ ನೆತ್ತರು ಹರಿಸಿದ ಅಮಿತ್ ಶಾ
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕಿನ ಕಾರ್ಮಿಕ ಅಧಿಕಾರಿಗಳು ಉಪಸ್ಥಿತರಿದ್ದರು.