ರಾಜ್ಯದ ಪ್ರತಿ ತಾಲೂಕು ಆಸ್ಪತ್ರೆಗಳನ್ನು ಮಿನಿ ಜಿಲ್ಲಾಸ್ಪತ್ರೆಯನ್ನಾಗಿಸಿ ಪ್ರತಿ ಆಸ್ಪತ್ರೆಗಳಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸಲು ಕ್ರಮವಹಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಯಚೂರಿನ ತಾಯಿ ಮಕ್ಕಳ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಯಚೂರು ವೈದ್ಯಕೀಯ ಮಹಾವಿದ್ಯಾಲಯ ವತಿಯಿಂದ ಹಮ್ಮಿಕೊಂಡಿದ್ದ ಮಾತೃತ್ವ ಸುರಕ್ಷಾ ಅಭಿಯಾನದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಶಿಕ್ಷಣ ಮತ್ತು ಆರೋಗ್ಯ ಸೇವೆಗಳ ಅಗತ್ಯತೆ ಹೆಚ್ಚಾಗಿರುವ ರಾಯಚೂರು ಜಿಲ್ಲೆಯಿಂದಲೇ ರಾಜ್ಯಮಟ್ಟದ ಕಾರ್ಯಕ್ರಮವನ್ನು ಆರಂಭಿಸಲಾಗಿದೆ ಎಂದರು.
ಪ್ರಸ್ತುತ ರಾಜ್ಯದ ಗರ್ಭಿಣಿಯರ ಮರಣದ ಸೂಚ್ಯಂಕ ಸಮಾಧಾನಕರ ವಿಷಯವಲ್ಲ. ಗರ್ಭಿಣಿಯರ ಮರಣದ ಸಂಖ್ಯೆಯನ್ನು ಶೂನ್ಯಕ್ಕೆ ನಿಲ್ಲಿಸಲು ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದರ ಭಾಗವಾಗಿ ಇದೀಗ ಮಾತೃತ್ವ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಈ ಅಭಿಯಾನ ರಾಜ್ಯದ ಪ್ರತಿಯೊಂದು ಜಿಲ್ಲೆ ಮತ್ತು ತಾಲೂಕುಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
ಸರಿಯಾದ ಸಮಯಕ್ಕೆ ಸರಿಯಾದ ಚಿಕಿತ್ಸೆ ನೀಡಲು ಹಾಗೂ ತಜ್ಞ ವೈದ್ಯರನ್ನು ನೇಮಿಸಿಕೊಂಡು ಪ್ರತಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದು ಹಾಗೂ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ಮಿನಿ ಜಿಲ್ಲಾಸ್ಪತ್ರೆಗಳ ಮಾದರಿಯಲ್ಲಿ ಚಿಕಿತ್ಸೆ ನೀಡಲಾಗುವುದು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಕನಿಷ್ಟ 10 ಸಾವಿರ ರೂ,ಗಳ ಪ್ರೋತ್ಸಾಹ ಧನ ನೀಡಲು ಸರ್ಕಾರ ತೀರ್ಮಾನ ಕೈಗೊಳ್ಳಲಾಗಿದ್ದು, ಇದು ಆಶಾಗಳಿಗೆ ನೀಡಿದ ಸರ್ಕಾರ ಮತ್ತೊಂದು ಗ್ಯಾರಂಟಿಯಾಗಿದೆ. ಆದ್ದರಿಂದ ಆಶಾ ಕಾರ್ಯಕರ್ತೆಯರು ಸರಿಯಾದ ರೀತಿಯಲ್ಲಿ ಸೇವೆ ನೀಡಬೇಕು ಎಂದು ತಿಳಿಸಿದರು.
ಈಗಾಗಲೇ ರಾಯಚೂರು ಜಿಲ್ಲೆಗೆ 8 ಹೊಸ ಹಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನೀಡಲಾಗಿದೆ. ಮಾನ್ವಿ ಪಟ್ಟಣದಲ್ಲಿ ಹೊಸ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಗಿದೆ. ಹೊಸ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಜಿಲ್ಲೆಯಲ್ಲಿ ಶೀಘ್ರವೇ 200 ಹಾಸಿಗೆಗಳುಳ್ಳ ಉಪವಿಭಾಗ ಆಸ್ಪತ್ರೆಯನ್ನು ನೀಡಲು ಟೆಂಡರ್ ಕರೆಯುವ ಮೂಲಕ ಉನ್ನತ ಚಿಕಿತ್ಸೆ ನೀಡಲು ಸರ್ಕಾರ ಎಲ್ಲಾ ರೀತಿಯಿಂದಲೂ ಬದ್ಧವಾಗಿದೆ ಎಂದರು.
ಇದೇ ವೇಳೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಮಾತನಾಡಿ, ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಡವರ ಪರವಾದ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಯನ್ನು ಕಟ್ಟಿಕೊಂಡಿರುವ ರಾಯಚೂರು ಜಿಲ್ಲೆಯಲ್ಲಿ ಸರ್ಕಾರ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಂತಸದ ವಿಚಾರ. ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ದಿನದಿಂದ ಕೆಕೆಆರ್‌ಡಿಬಿ ವತಿಯಿಂದ 900 ಕೋಟಿ ರೂ.ಗಳ ಅನುದಾನದಲ್ಲಿ ಆಸ್ಪತ್ರೆಗಳ ಅಭಿವೃದ್ಧಿಗೆ ಮುಂದಾಗಿದೆ. ಪ್ರಸ್ತುತ ರಾಜ್ಯದ ಶಿಕ್ಷಣ ವಲಯ ಸುಧಾರಿಸುತ್ತಿದೆ. ಆದಾಗ್ಯೂ ಸರ್ಕಾರದಿಂದ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ನೀಡಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.
ಈ ಸುದ್ದಿ ಓದಿದ್ದೀರಾ?: ರಾಯಚೂರು | ಹೊರಗುತ್ತಿಗೆ ಸಿಬ್ಬಂದಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ
ಕಾರ್ಯಕ್ರಮದಲ್ಲಿ ಮಾನ್ವಿ ಶಾಸಕ ಹಂಪಯ್ಯ ನಾಯಕ, ಮಹಾನಗರ ಪಾಲಿಕೆ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ಉಪಾಧ್ಯಕ್ಷ ಸಾಜೀದ್ ಸಮೀರ್, ಹಿರಿಯ ಪಾಲಿಕೆ ಸದಸ್ಯ ಜಯಣ್ಣ, ಆರ್‌ಎಪಿಎಂಸಿ ಅಧ್ಯಕ್ಷ ಜಯಂತರಾವ್ ಪತಂಗೆ, ಮಹ್ಮದ ಶಾಲಂ, ಜಿಲ್ಲಾಧಿಕಾರಿ ಕೆ.ನಿತೀಶ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ, ಡಿಎಚ್‌ಓ ಡಾ.ಸುರೇಂದ್ರಬಾಬು, ಕಾಂಗ್ರೆಸ್ ಮುಖಂಡ ನರಸಿಂಹಲು ಮಾಡಗಿರಿ ಸೇರಿದಂತೆ ಇತರರಿದ್ದರು.
