ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳು ನಡೆಸುತ್ತಿರುವ ಅಹೋರಾತ್ರಿ ಧರಣಿಯ ಕಾರ್ಯಕರ್ತರು ಮಧ್ಯ ರಾತ್ರಿ ಗಣರಾಜ್ಯ ದಿನವನ್ನು ಆಚರಿಸಿದರು.
ರಾಯಚೂರು ಜಿಲ್ಲಾ ಕ್ರೀಡಾಂಗಣದ ಆವರಣದಿಂದ ಅಂಬೇಡ್ಕರ್ ಸರ್ಕಲ್ ವರಗೆ ಮೇಣದ ಬತ್ತಿ ಹಿಡಿದುಕೊಂಡು ಜೈ ಭೀಮ್ ಘೋಷಣೆ ಕೂಗುವ ಮೆರವಣಿಗೆ ನಡೆಸಿದರು.
ಈ ವೇಳೆ ಮಾತನಾಡಿದ ವಿದ್ಯಾ ಪಾಟೀಲ್, “ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ನೀಡಿದ ಹಕ್ಕುಗಳು ಬಡ ಜನರಿಗೆ ಸಿಗುತ್ತಿಲ್ಲ. ಸರ್ಕಾರಿ ಶಾಲೆಯ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ದೊರಕಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಅಂತಹ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗದಂತೆ ಸರ್ಕಾರ ಕ್ರಮವಹಿಸಬೇಕು” ಎಂದರು.
“ಹಣದ ಆಮಿಷ ತೋರಿಸಿ ಮತ ಪಡೆದು ಅಧಿಕಾರ ಹಿಡಿದ ಜನಪ್ರತಿನಿಧಿಗಳು ಸಾಮಾನ್ಯ ಜನರನ್ನೇ ಒಕ್ಕಲೆಬ್ಬಿಸುತ್ತಿದ್ದಾರೆ. ಕೂಲಿ ಕಾರ್ಮಿಕರು, ರೈತರು, ಮಹಿಳೆಯರು, ಹಿಂದುಳಿದ ವರ್ಗದ ಜನರ ಬಗ್ಗೆ ಕೇವಲ ತಮ್ಮ ಭಾಷಣಗಳಲ್ಲಿ ಮಾತ್ರ ಮಾತನಾಡುತ್ತಾರೆ. ಆದರೆ ಅವರ ಸಮಸ್ಯೆಗಳನ್ನು ಬಗೆಹರಿಸಲು ಯೋಚನೆ ಕೂಡ ಮಾಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ?: ರಾಯಚೂರು | ಶುದ್ಧ ಕುಡಿಯುವ ನೀರು ಪೂರೈಕೆ ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಬೃಹತ್ ಪ್ರತಿಭಟನೆ
ಪ್ರಗತಿಪರ ಸಂಘಟನೆಗಳಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಭೇಟಿ ನೀಡಿ ಮುಖಂಡರೊಂದಿಗೆ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು, ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರುಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಕಾರ್ಯಕರ್ತರ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಸಿದರು.
