ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮಿ ಮತ್ತು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಮತ್ತು ವಿಶ್ವಗುರು ಬಸವಣ್ಣನವರ ವಿರೋಧಿಸಿ ಹೇಳಿಕೆ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಭೀಮ್ ಆರ್ಮಿ ಆಗ್ರಹಿಸಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಭೀಮ್ ಆರ್ಮಿ ಘಟಕದಿಂದ ತಹಶೀಲ್ದಾರ್ ಮುಖಾಂತರ ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.
ಮನವಿ ಸಲ್ಲಿಸಿದ ಸಂಘಟನಾಕಾರರು, “ಪೇಜಾವರ ಮಠದ ಸ್ವಾಮೀಜಿ ʼತಮ್ಮನ್ನು ಗೌರವಿಸುವ ಸಂವಿಧಾನ ಬೇಕುʼ ಎಂದು ಹೇಳುವ ಮೂಲಕ ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ. ಚಂದ್ರಶೇಖರ ಸ್ವಾಮೀಜಿ ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ‘ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ವಿಜಯಪುರದ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ಹೇಳಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಈ ಮೂವರ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಮಕ್ಕಳ ಮೇಲೆ ದೌರ್ಜನ್ಯ, ಹಲ್ಲೆ; ಕಾನ್‌ಸ್ಟೆಬಲ್ ವಿರುದ್ಧ ಪ್ರಕರಣ ದಾಖಲು
“ಪದೇಪದೆ ಸಂವಿಧಾನ ವಿರೋಧಿ ಹೇಳಿಕೆಯಿಂದ ದೇಶದ ಸಮಸ್ತ ದಲಿತರು, ಹಿಂದುಳಿದವರು, ಶೋಷಿತರು, ದಮನಿತರು, ಅಲ್ಪಸಂಖ್ಯಾತರು, ಮಹಿಳೆಯರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾರೆ. ಇಂತಹ ಹೇಳಿಕೆಗಳು ಮುಂದುವರೆದಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಎಂಆರ್‌ಎಚ್‌ಎಚ್‌ಎಸ್ ಜಿಲ್ಲಾಧ್ಯಕ್ಷ ಹನುಮಂತ ಮನ್ನಾಪೂರಿ, ಭೀಮ್ ಆರ್ಮಿ ಗೌರವಾಧ್ಯಕ್ಷ ಬಸವರಾಜ ಎಮ್ ಪಾಟೀಲ, ಗುಂಡಪ್ಪ ನಾಯಕ, ವಿಶ್ವನಾಥ ಬಲ್ಲಿದೇವ, ಮೌನೇಶ್ ಗಾಣದಾಳ, ಶಬ್ಬೀರ್ ಭುವಾಜಿ, ಸದ್ದಾಂ ಹುಸೇನ್, ಆಸೀಫ್ ಖುರೇಷಿ ಸೇರಿದಂತೆ ಇತರರು ಇದ್ದರು.
