ಕಲಬುರಗಿ ಜಿಲ್ಲಾ ಉಸ್ತುವಾರಿ ಮತ್ತು ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ ಅವರ ಹೇಳಿಕೆ ಖಂಡಿಸಿ ಇಬ್ಬರ ವಿಧಾನಪರಿಷತ್ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡಸಿ ಚಲುವಾದಿ ನಾರಾಯಣಸ್ವಾಮಿ ಹಾಗೂ ಮುಖ್ಯ ಸಚೇತಕರಾದ ಎನ್.ರವಿಕುಮಾರ ಅವರ ವಿರುದ್ದ ಘೋಷಣೆ ಕೂಗಿ ಇಬ್ಬರ ಪ್ರತಿಕ್ರತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಅವರು ಸಚಿವರಾದ ಪ್ರಿಯಾಂಕ್ ಖರ್ಗೆಯವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ ಅವರು ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ ಕುರಿತು ಪಾಕಿಸ್ತಾನದಿಂದ ಬಂದಿರಬಹುದು ಎಂದು ಅವಮಾನಿಸಿ ನೀಡಿರುವ ಹೇಳಿಕೆಗಳು ಅಕ್ಷಮ್ಯ ಅಪರಾಧ ಕೂಡಲೇ ಸ್ಥಾನದಿಂದ ವಜಾಗೊಳಿಸಿ ಎಂದು ಆಗ್ರಹಿಸಿದರು.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರು ಕಲಬುರಗಿ ಜಿಲ್ಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆಯವರ ಬಗ್ಗೆ ವೈಯಕ್ತಿಕವಾಗಿ ಅವಹೇಳನಕಾರಿಯಾಗಿ ಟೀಕೆ ಮಾಡಿದ್ದಾರೆ.ದೇಶದ ಪ್ರಧಾನ ಮಂತ್ರಿಗಳನ್ನು ಪ್ರಶ್ನೆ ಮಾಡಲು ಪ್ರಿಯಾಂಕ್ ಖರ್ಗೆ ಯಾರು ಎಂದು ಕೇಳಿರುವ ಚಲುವಾದಿ ನಾರಾಯಣಸ್ವಾಮಿಯವರು ದೇಶದ ಪ್ರಜಾಪ್ರಭುತ್ವದ ತಳಹದಿ ಮರೆತು ರಾಜ್ಯದ ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕರಾಗಿದ್ದು ದುರಂತ ಎಂದು ಆರೋಪಿಸಿದರು.
ಎನ್.ರವಿಕುಮಾರ ಅವರು ಕಲಬುರಗಿಯಲ್ಲಿ ಮಾತನಾಡಿ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ ಅವರು ಪಾಕಿಸ್ತಾನದಿಂದ
ಬಂದಿರಬಹುದು, ಕಲಬುರಗಿ ಕರ್ನಾಟಕದಲ್ಲಿದೆಯೋ ಅಥವಾ ಪಾಕಿಸ್ತಾನದಲ್ಲಿದೆಯೋ ಎಂದು ಮಾತನಾಡಿ ಜಿಲ್ಲೆಯ ಜಿಲ್ಲಾಧಿಕಾರಿಗೆ ಮಾಡಿದ ಅವಮಾನವಲ್ಲದೇ, ಸಂವಿಧಾನ ಬದ್ಧವಾಗಿ ಉದ್ದೇಶಪೂರ್ವಕವಾಗಿ ಅವಮಾನ ಮಾಡಿರುತ್ತಾರೆ.ಪ್ರತಿಭಟನೆ ನಡೆಯುತ್ತಿರುವ ಯಾವುದೇ ಸಂಬಂಧವಿಲ್ಲದಿದ್ದರೂ ಮುಸ್ಲಿಂ ಎಂಬ ಕಾರಣಕ್ಕೆ ಮಾತನಾಡಿದ್ದು ಸರಿಯಲ್ಲ ಎಂದು ಖಂಡಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; 4 ಗ್ರಾಮ ಆಡಳಿತಾಧಿಕಾರಿ ಸೇರಿ ಐವರ ವಿರುದ್ದ ದೂರು
ದೇಶದಲ್ಲಿ ಬಿಜೆಪಿ ಪಕ್ಷದ ನಾಯಕರು ವಿವಿಧ ಹಂತದಲ್ಲಿ ಕಾಂಗ್ರೆಸ್ ನಾಯಕರನ್ನು ಮತ್ತು ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಲೇ ಬಂದಿರುತ್ತಾರೆ.ಹಿಂದೆಯೂ ಸಹ ಹಲವು ಸಲ ಇಂತಹ ಕೊಳಕು ಹೇಳಿಕೆಗಳನ್ನು ಪದೇ ಪದೇ ಹೇಳಿಕೊಂಡೇ ರಾಜಕೀಯ ಪ್ರವರ್ಧಮಾನಕ್ಕೆ ಬಂದಿದ್ದಾರೆಂದು ಆರೋಪಿಸಿದ್ದಾರೆ.ಇವರಿಬ್ಬರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಸಚಿವ ಎನ್.ಎಸ್.ಬೋಸರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ,ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ , ಜಿಲ್ಲಾಧ್ಯಕ್ಷ ಬಸವರಾಜ ಪಾಟೀಲ್ ಇಟಗಿ,ರಜಾಕ್ ಉಸ್ತಾದ ಇನ್ನಿತರರು ಉಪಸ್ಥಿತರಿದ್ದರು.