ರಾಯಚೂರು ಜಿಲ್ಲೆಯಲ್ಲಿ ಸರ್ಕಾರಿ ಇಎಸ್‌ಐ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದೆ.
ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾರ್ಮಿಕರಿದ್ದು, ಕಾರ್ಮಿಕರಿಗೆ ಸೂಕ್ತ ಚಿಕಿತ್ಸೆಗಾಗಿ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ಇಲ್ಲ. ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಮತ್ತು ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಹಾಗೂ ಕಟ್ಟಡ ಕಾರ್ಮಿಕ ಕ್ಷೇತ್ರ ಸೇರಿದಂತೆ ಇನ್ನಿತೆ ವಲಯಗಳಲ್ಲಿ ಕಾರ್ಮಿಕರಿಂದ ಕೋಟ್ಯಾಂತರ ರೂ. ಹಣ ರಾಜ್ಯ ಕಾರ್ಮಿಕ ವಿಮಾ ನಿಗಮಕ್ಕೆ ಸಂದಾಯವಾಗುತ್ತಿದೆ. ಆದರೆ ಕಾರ್ಮಿಕರುವ ಪಾವತಿಸುವ ಹಣಕ್ಕೆ ಸರಿಯಾದ ಚಿಕಿತ್ಸೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ದೂರಿದರು.
“ಕಾರ್ಮಿಕರ ಚಿಕಿತ್ಸೆಗಾಗಿ ಪರದಾಡುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣ ನೀಡಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ, ಕಟ್ಟದ ವಿಮಾ ಕಂತುಗಳನ್ನು ಯಾವ ಪ್ರಯೋಜನೆ ಇಲ್ಲದಂತಾ ಗಿದೆ, ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ಇದ್ದು, ಅಲ್ಲಿ ಚಿಕಿತ್ಸೆ ಇಲ್ಲದಂತಾಗಿದೆ, ಕಾರ್ಮಿಕರು ರಿಮ್ಸ್ ಹಾಗೂ ಇನ್ನಿತರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯು ತ್ತಿದ್ದಾರೆ. ಕಾರ್ಮಿಕರ ವೇತನದಲ್ಲಿ ಪ್ರತಿ ತಿಂಗಳು ಹಣ ಸಂಗ್ರಹಿಸುತ್ತಿದ್ದು, ಕಾರ್ಮಿಕರಿಗೆ ಸಮರ್ಪಕವಾಗಿ ಗುಣಮಟ್ಟದ ಚಿಕಿತ್ಸೆ ಸಿಗುತ್ತಿಲ್ಲ. ಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾಗಬೇಕು” ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಲಕ್ಷ್ಮಣ ಕುರ್ಡಿ, ಚನ್ನಬಸವ ಯಕ್ಲಾಸಪೂರ, ಜಿಲ್ಲಾ ಸಂಘಟನಾ ಸಂಚಾಲಕ ಶರಣಪ್ಪ ದಿನ್ನಿ, ಪ್ರಕಾಶ ಸಿರವಾರ, ಅನಿತ್ ಸಿಂಗ್ ಸೇರಿದಂತೆ ಇತರರು ಇದ್ದರು.
ವರದಿ : ಹಫೀಜುಲ್ಲ