ಹಾಸ್ಟೆಲ್, ವಸತಿ ಶಾಲೆ ಹಾಗೂ ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ರಾಯಚೂರು ಜಿಲ್ಲಾ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕೆಲಸ ಮಾಡುವ ಕಾರ್ಮಿಕರಿಗೆ ತಿಂಗಳಿಗೆ ಕನಿಷ್ಠ ವೇತನ ಮಾಸಿಕ ₹31 ಸಾವಿರ ನೀಡಬೇಕು. ನೇರವಾಗಿ ಇಲಾಖೆಯಿಂದ ಖಾತೆಗೆ ವೇತನ ಜಮಾ ಮಾಡಬೇಕು. ನಿವೃತ್ತಿವರೆಗೆ ಸೇವಾ ಭದ್ರತೆ ಒದಗಿಸಿಕೊಡಬೇಕು. ಕಾರ್ಮಿಕ ಕಾನೂನು ಪ್ರಕಾರ ಕಡ್ಡಾಯವಾಗಿ ವಾರಕ್ಕೆ ಒಂದು ರಜೆ ನೀಡಬೇಕು ಹಾಗೂ ಕೆಲಸದ ಸಮಯ ನಿಗದಿಪಡಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟರು.
ಗುತ್ತಿಗೆದಾರರು ಸಂಬಳದ ಚೀಟಿ, ನೇಮಕಾತಿ ಆದೇಶ ಪತ್ರ, ಐಡಿ ಕಾರ್ಡ್, ಸರ್ವೀಸ್ ಸರ್ಟಿಫಿಕೇಟ್, ಇಎಸ್‌ಐ ಮತ್ತು ಪಿಎಫ್ ಹಣ ತುಂಬಿದ ರಶೀದಿ ಕೊಡಬೇಕು. ಹಿಂದುಳಿದ ವರ್ಗ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿತ ಮಾಡಿರುವ ಆದೇಶ ರದ್ದಾಗಬೇಕು. 50 ವಿದ್ಯಾರ್ಥಿಗಳಿಗೆ 3 ಜನ ಸಿಬ್ಬಂದಿಯಂತೆ ಹಿಂದಿನ ಪದ್ಧತಿ ಮುಂದುವರಿಸಬೇಕು. ಪ್ರತಿ ತಿಂಗಳು 5ನೇ ತಾರೀಕಿನಂದು ವೇತನ ಪಾವತಿಸಬೇಕು. ಬಾಕಿ ಇರುವ ಸಂಬಳವನ್ನು ತಕ್ಷಣ ಪಾವತಿ ಮಾಡಬೇಕು ಎಂದು ಒತ್ತಾಯಿಸಿದರು.
10 ವರ್ಷ ಸೇವೆ ಸಲ್ಲಿಸಿರುವ ಎಲ್ಲ ಹೊರಗುತ್ತಿಗೆ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ತರಬೇಕು. ಬಿಸಿಎಂ ಇಲಾಖೆಯಲ್ಲಿ ಕೆಲಸ ಕಳೆದುಕೊಂಡಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ಮತ್ತೆ ಮರು ನೇಮಕ ಮಾಡಿಕೊಳ್ಳಬೇಕು. ಹೊಸದಾಗಿ ಪ್ರಾರಂಭ ಮಾಡುವ ಹಾಸ್ಟೆಲ್‌ಗಳಿಗೆ ಕಡ್ಡಾಯವಾಗಿ ನೇಮಕ ಮಾಡಬೇಕು. ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರಿಂದ ಶೌಚಾಲಯ ಸ್ವಚ್ಛ ಮಾಡಿಸಬಾರದು, ವಸತಿ ನಿಲಯ ಮತ್ತು ಹಾಸ್ಟೆಲ್‌ಗಳಿಗೆ ವಾರ್ಡನ್ ಗಳು ಮಕ್ಕಳ ಅಡುಗೆಗೆ ಅಗತ್ಯವಾಗಿ ಬೇಕಾದ ಗುಣಮಟ್ಟದ ಆಹಾರ ಸಾಮಗ್ರಿಗಳನ್ನು ಸರಿಯಾದ ಪ್ರಮಾಣದಲ್ಲಿ ತಂದು ಕೊಡಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ 10 ಲಕ್ಷ ಪರಿಹಾರ ನೀಡಬೇಕು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ?: ರಾಯಚೂರು | ಅಕ್ರಮ ಕಲ್ಲು ಗಣಿಗಾರಿಕೆ ವಿರೋಧಿಸಿ ಧರಣಿ
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷೆ ರೇಣುಕಮ್ಮ, ಕಾರ್ಯದರ್ಶಿ ಕರಿಯಪ್ಪ ಅಚ್ಚೊಳ್ಳಿ, ರವಿಕುಮಾರ, ಸಾಬಣ್ಣ, ಶಂಕರ ಗುರು ಸೇರಿದಂತೆ ಅನೇಕರು ಇದ್ದರು.
