ಕೃಷಿ ಕ್ಷೇತ್ರಕ್ಕೆ ಪ್ರತ್ಯೇಕವಾಗಿ ಒಂದು ಲಕ್ಷ ಕೋಟಿ ರೂಪಾಯಿಯ ಬಜೆಟ್ ಮಂಡನೆ ಮಾಡಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
“ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ಬಜೆಟ್‍ನಲ್ಲಿ 3.09 ಲಕ್ಷ ಕೋಟಿ ರೂ. ಬಜೆಟ್ ಮಂಡನೆಯಾಗಿತ್ತು. ಅದರಲ್ಲಿ, ಕೃಷಿ ವಲಯಕ್ಕೆ 39,031 ಕೋಟಿ ರೂ. ಅನುದಾನ ನೀಡಲಾಗಿತ್ತು. ಪ್ರಸ್ತುತ ರಾಜ್ಯದಲ್ಲಿ ಮಳೆ ಕೊರತೆಯಿಂದ ಬರದ ಛಾಯೆ ಆವರಿಸಿದೆ. ರೈತರ ಜೀವನ ಮಟ್ಟ ತುಂಬಾ ಶೋಚನಿಯವಾಗಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೃಷಿ ಪರಿಕರಗಳ ಬೆಲೆ ಏರಿಕೆಯಿಂದ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ” ಎಂದು ದೂರಿದರು.
“ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಬೇಕು. ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಸಾಮರ್ಥ್ಯ 135ಟಿಎಂಸಿ ಇದ್ದು, ಅಂದಾಜು 35 ಟಿಎಂಸಿಗೂ ಹೆಚ್ಚು ಪ್ರಮಾಣದಲ್ಲಿ ಹೂಳು ತುಂಬಿದೆ. ಇದರಿಂದ ನೀರಿನ ಸಂಗ್ರಹಣೆಯೂ ಕಡಿಮೆಯಾಗಿದೆ. ಹೀಗಾಗಿ, ನವಲಿ ಬಳಿ ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡಬೇಕು. ಅದಕ್ಕಾಗಿ, ಅನುದಾನ ಮೀಸಲಿಡಬೇಕು” ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ರಂಗನಾಥ ಪಾಟೀಲ,ಪ್ರಧಾನ ಕಾರ್ಯದರ್ಶಿ ಮಂಜುನಾಥ ದಳವಾಯಿ, ಪದಾಧಿಕಾರಿ ಕೊಂಡರಾಜು, ಹನುಮಂತ ಊಟಿ, ರಾಮಾಂಜನೇಯ ಇದ್ದರು.