ರಾಜ್ಯದಲ್ಲಿ ಜನಪರ ಶಿಕ್ಷಣವನ್ನು ರೂಪಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕು ಎಂದು ಎಸ್‌ಎಲ್‌ಎನ್ ಎಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎಸ್ ಬಿ ಚೆಟ್ಟಿ ಹೇಳಿದರು.
ರಾಯಚೂರು ನಗರದ ಕನ್ನಡ ಭವನದಲ್ಲಿ ಎಐಡಿಎಸ್‌ಒ ಸಂಘಟನೆಯ ಜಿಲ್ಲಾ ಮಟ್ಟದ 6ನೇ ವಿದ್ಯಾರ್ಥಿ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
“ಕಾರ್ಪೊರೇಟ್ ಕಂಪನಿಗಳ ಬಳಿ ಧನಸಹಾಯ ಪಡೆಯುವ ಬದಲಾಗಿ, ಜನಗಳಿಂದ ಸಂಗ್ರಹಿಸಿರುವ ತೆರಿಗೆ ಹಣದಲ್ಲಿ ಶಿಕ್ಷಣಕ್ಕೆ ಅನುದಾನ ನೀಡಿ, ಕೌಶಲ್ಯ ಆಧಾರಿತ ಶಿಕ್ಷಣ ನೀಡಿ ಶಿಕ್ಷಣ ನೀತಿಯನ್ನು ರೂಪಿಸಬೇಕು” ಎಂದು ಒತ್ತಾಯಿಸಿದರು.
ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳಿಗೆ ಶೇ.10ರಷ್ಟು ಶುಲ್ಕ ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನು ಕೈಬಿಡಬೇಕಾಗಿದೆ. ಸರ್ಕಾರಿ ಕೋಟಾದಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಶುಲ್ಕ ಹೆಚ್ಚಳ ಮಾಡಿದ್ದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ” ಎಂದರು.
ಶೈಕ್ಷಣಿಕ ಶುಲ್ಕ ಏರಿಕೆಯು ಮೆರಿಟ್ ಕೋಟಾವನ್ನು ಕಸಿದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದೆ. ತೀವ್ರ ಆರ್ಥಿಕ ಬಿಕ್ಕಟ್ಟಿನ ಕಾರಣ ಹಲವು ಕೆಳ-ಮಧ್ಯಮ ವರ್ಗ ಹಾಗೂ ಬಡ ಕುಟುಂಬಗಳ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಸೇರಿದಂತೆ ಇತರ ಉದ್ಯೋಗಾಧಾರಿತ ವ್ಯಾಸಂಗದ ಕಡೆ ಮುಖ ಮಾಡಿದ್ದಾರೆ. ವಿದ್ಯಾರ್ಥಿಗಳ ಮೂಲಭೂತ ಹಕ್ಕಾದ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕಾಗಿದೆ” ಎಂದು ತಿಳಿಸಿದರು.
ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಮಾತನಾಡಿ, “ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಡಿಮೆ ದಾಖಲಾತಿ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುತ್ತಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದೆ. ಸರ್ಕಾರಿ ಶಾಲೆಗಳನ್ನು ಉಳಿಸುವ ಕೆಲಸ ಮಾಡದೇ ಮತ್ತೊಂದೆಡೆ ಖಾಸಗಿ ಶಾಲೆಗಳ ಪರವಾನಗಿ ನೀಡಿ ಸಂಪೂರ್ಣವಾಗಿ ಸರ್ಕಾರಿ ಶಾಲೆಗಳನ್ನೇ ಮುಚ್ಚುವ ಕೆಲಸ ಮಾಡುತ್ತಿದೆ” ಎಂದು ಆರೋಪಿಸಿದರು.
ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಹಯ್ಯಾಳಪ್ಪ ಗೊತ್ತುವಳಿ ಮಂಡಿಸಿ ಮಾತನಾಡಿ, “ಜಿಲ್ಲೆಯಲ್ಲಿ ಸಾಕಷ್ಟು ಸರ್ಕಾರಿ ಶಾಲಾ ಕಾಲೇಜುಗಳ ಕಟ್ಟಡ ನಿರ್ಮಾಣ, ಶೌಚಾಲಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಂತಾಗಿದೆ, ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಿಕೊಡಬೇಕು, ರಾಯಚೂರು ವಿಶ್ವ ವಿದ್ಯಾಲಯಕ್ಕೆ ಅನುದಾನ ನೀಡಿ ಅಭಿವೃದ್ಧಿಪಡಿಸಬೇಕು, ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಸರಿಯಾದ ಸಮಯಕ್ಕೆ ಫಲಿತಾಂಶ ಬರುವುದಿಲ್ಲ ಮತ್ತು ಶೈಕ್ಷಣಿಕ ವೇಳಾಪಟ್ಟಿ ತಕ್ಕಂತೆ ಪರೀಕ್ಷೆಗಳು ನಡೆಯುತ್ತಿಲ್ಲ. ಸರಿಯಾದ ಸಮಯಕ್ಕೆ ಅಂಕಪಟ್ಟಿ ಕೊಡಿವುದಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಹಲವು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸುದ್ದಿ ಒದಿದ್ದೀರಾ? ಹಾಸನ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಸ್‌ಎಫ್‌ಐ ಆಗ್ರಹ
“ಗ್ರಾಮೀಣ ಭಾಗಕ್ಕೆ ಸಮರ್ಪಕ ಬಸ್ ಸೌಲಭ್ಯ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಕಿಲೋ ಮೀಟರ್ ಗಟ್ಟಲೆ ನಡೆದುಕೊಂಡು ಬರುವ ಪರಿಸ್ಥಿತಿ ಇದೆ. ಇವೆಲ್ಲವುಗಳಿಗೆ ಸರ್ಕಾರದ ಅನುದಾನ ನೀಡಿ ಶೈಕ್ಷಣಿಕ ವ್ಯವಸ್ಥೆಯನ್ನು ಬಲಪಡಿಸಬೇಕಾಗಿದೆ” ಎಂದು ತಿಳಿಸಿದರು.
ರಾಜ್ಯ ಖಜಾಂಚಿ ಅಭಯ ದಿವಾಕರ್, ಕಾರ್ಯದರ್ಶಿ ಪೀರ್ ಸಾಬ್, ಜಿಲ್ಲಾ ಸಮಿತಿ ಸದಸ್ಯ ಹೇಮಂತ್, ಬಸವರಾಜ್, ಅಮೋಘ, ವಿರೇಶ್ ಸೇರಿದಂತೆ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಇದ್ದರು.
ವರದಿ : ಹಫೀಜುಲ್ಲ