ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ಕರಣಿ ಗ್ರಾಮದ 21 ವರ್ಷದ ದಲಿತ ಯುವತಿ ಅಶ್ವಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ) ವತಿಯಿಂದ ಮಂಗಳವಾರ ನಗರದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ನಗರದ ಜಗತ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ನಡೆದ ಧರಣಿಯಲ್ಲಿ ಪ್ರತಿಭಟನಾಕಾರರು ಅಶ್ವಿನಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಹಾಗೂ ಪ್ರಕರಣದ ಎಲ್ಲ ಆರೋಪಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಧರಣಿಯನ್ನು ಉದ್ದೇಶಿಸಿ ದಸಂಸ ಹಿರಿಯ ಮುಖಂಡ ಅರ್ಜುನ ಭದ್ರೆ ಮಾತನಾಡಿ, “ರಾಯಚೂರು ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ದಲಿತ ಸಮುದಾಯಕ್ಕೆ ಸೇರಿದ ಮೂವರು ಬರ್ಬರವಾಗಿ ಹತ್ಯೆಯಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ದಲಿತರು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
“ಹೊಕ್ಕರಣಿ ಗ್ರಾಮದ ಅಶ್ವಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿ ಬಾವಿಗೆ ಎಸೆದಿರುವುದು ಅತ್ಯಂತ ಅಮಾನವೀಯ ಕೃತ್ಯವಾಗಿದೆ. ಪ್ರಕರಣದ ಹಿಂದೆ ಪೂರ್ವಯೋಜಿತ ಸಂಚು ಅಥವಾ ಯಾವುದೇ ಪ್ರಭಾವಿ ವ್ಯಕ್ತಿಗಳ ಪಾತ್ರವಿದ್ದರೆ, ಸಮಗ್ರ ತನಿಖೆ ನಡೆಸಿ ಸತ್ಯವನ್ನು ಬಹಿರಂಗಪಡಿಸಬೇಕು” ಎಂದು ಆಗ್ರಹಿಸಿದರು.
“ರಾಜ್ಯದಲ್ಲಿ ಮಹಿಳೆಯರು, ವಿಶೇಷವಾಗಿ ದಲಿತ ಮಹಿಳೆಯರು ಹಾಗೂ ಬಾಲಕಿಯರ ಮೇಲೆ ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ನಡೆಯುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಕರ್ತವ್ಯಲೋಪ ಎಸಗುವ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕಠಿಣ ಶಿಸ್ತು ಕ್ರಮ ಜರುಗಿಸಬೇಕು” ಎಂದು ಹೇಳಿದರು.
“ಅಶ್ವಿನಿ ಪ್ರಕರಣದ ತನಿಖೆಯನ್ನು ದಕ್ಷ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ನಡೆಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಬಂಧಿಸಿ, ಕಾನೂನುಬದ್ಧ ಗರಿಷ್ಠ ಶಿಕ್ಷೆಗೆ ಗುರಿಪಡಿಸಬೇಕು. ಯಾವುದೇ ರಾಜಕೀಯ ಅಥವಾ ಪ್ರಭಾವಿ ವ್ಯಕ್ತಿಗಳ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಇದೇ ವೇಳೆ ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಮಾತನಾಡಿ, “ಅಶ್ವಿನಿ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಕುಟುಂಬದ ಅರ್ಹ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು. ಹೊಕ್ಕರಣಿ ಗ್ರಾಮದ ದಲಿತ ಕುಟುಂಬಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಹಾಗೂ ಭದ್ರತೆ ಒದಗಿಸಬೇಕು” ಎಂದು ಆಗ್ರಹಿಸಿದರು.
“ಮಹಿಳೆಯರು ಮತ್ತು ಬಾಲಕಿಯರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳಿಗೆ ತ್ವರಿತ ನ್ಯಾಯ ದೊರಕುವಂತೆ ವೇಗದ ನ್ಯಾಯಾಂಗ ಪ್ರಕ್ರಿಯೆ ಜಾರಿಗೊಳಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು” ಎಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ದಸಂಸ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಕೂಡ ಮಾತನಾಡಿದರು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಇದನ್ನು ಓದಿದ್ದೀರಾ? ಬೀದರ್ | ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೂಚನೆ
ಈ ಸಂದರ್ಭದಲ್ಲಿ ದಸಂಸ ಮುಖಂಡರಾದ ಮಹಾಂತೇಶ ಬಡದಾಳ, ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಅಜಾದಪೂರ, ರಾಜಕುಮಾರ ನಿಂಬಾಳ, ಪರಶುರಾಮ ರಾಜಪೂರ, ಪ್ರೀತಮ್ ನಾಕಮಾನ, ಮಹೇಶ್ ಕೋಕಿಲೆ, ಸೈಬಣ್ಣ ಕೋಟನೂರ್, ಸೇರಿದಂತೆ ಹಲವರು ಧರಣಿಯಲ್ಲಿ ಭಾಗವಹಿಸಿದ್ದರು.





