ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವವರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ನೆಮ್ಮದಿ ಪಡೆಯಬಹುದು ಎಂದು ರಾಯಚೂರು ಜಿಲ್ಲಾಧಿಕಾರಿ ಕೆ. ನಿತೀಶ್ ಅಭಿಪ್ರಾಯಪಟ್ಟರು.
ನಗರದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ 2024-25ನೇ ಸಾಲಿನ ನೌಕರರ ವಾರ್ಷಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾನಸಿಕ ನೆಮ್ಮದಿ ನೀಡುವಲ್ಲಿ ಕ್ರೀಡೆಗಳು ತುಂಬಾ ಸಹಕಾರಿಯಾಗಲಿದ್ದು, ಕ್ರೀಡಾ ಚಟುವಟಿಕೆ ಮುಗಿದ ಮೇಲೆ ಇನ್ನೂ ಹೆಚ್ಚಿನ ಉತ್ಸಾಹ, ಹುಮ್ಮಸ್ಸಿನಿಂದ ಕೆಲಸ ಮಾಡಲು ಸಹಕಾರಿಯಾಗಲಿವೆ” ಎಂದರು.
“ಪಿಡಿಒಗಳಿಗಾಗಿ ಹಮ್ಮಿಕೊಂಡಿರುವ ಕ್ರೀಡಾಕೂಟ ಸಂತಸವನ್ನು ತಂದಿದ್ದು, ಗ್ರಾಮಗಳಿಗೆ ಅಲ್ಲಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೇ ಜಿಲ್ಲಾಧಿಕಾರಿಗಳಾಗಿರುತ್ತಾರೆ. ನಿತ್ಯ ಗ್ರಾಮಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಲು ಮತ್ತು ಗ್ರಾಮಗಳಲ್ಲಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಪಿಡಿಒಗಳ ಜವಾಬ್ದಾರಿ ಹೆಚ್ಚಾಗಿರುತ್ತದೆ. ಕ್ರೀಡೆಗಳಿಂದ ಅವರ ಮಾನಸಿಕ ಒತ್ತಡವನ್ನು ದೂರ ಮಾಡಿಕೊಳ್ಳಬಹುದಾಗಿದೆ” ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ ಮಾತನಾಡಿ, “ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಮಾನಸಿಕ ನೆಮ್ಮದಿ ಮತ್ತು ಚೈತನ್ಯವನ್ನು ತುಂಬುವ ನಿಟ್ಟಿನಲ್ಲಿ ಕ್ರೀಡಾಕೂಡಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಕೆಲಸ ಹೆಚ್ಚಾಗಿರುತ್ತದೆ. ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಒತ್ತಡದಿಂದ ದೂರವಿರಬಹುದಾದ ಮಾರ್ಗಗಳನ್ನು ಕಂಡುಕೊಳ್ಳಬೇಕು” ಎಂದರು.
ಈ ಸುದ್ದಿ ಓದಿದ್ದೀರಾ?: ರಾಯಚೂರು | ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಟಿ ರೋಣಿ, ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ್, ರಾಯಚೂರು ತಾಲೂಕು ಪಂಚಾಯತ್ ಇಒ ಚಂದ್ರಶೇಖರ ಪವಾರ್, ಕೃಷಿ ವಿವಿಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ರಾಜಣ್ಣ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ ಸೇರಿದಂತೆ ಇತರರಿದ್ದರು.
