ಕಾರು ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಕಲ್ಲೂರ ಗ್ರಾಮದ ಬಳಿ ಸೋಮವಾರ ನಡೆದಿದೆ.
ಮೃತಪಟ್ಟವರನ್ನು ಕಾರಿನಲ್ಲಿದ್ದ ಆಫ್ರಾಜ್ ಬಿರಿಯಾನಿ, ಮಕ್ಬೂಲ್ ಮತ್ತು ಯಾಸೀನ್ ಎಂದು ಗುರುತಿಸಲಾಗಿದೆ. ಲಾರಿ ರಭಸಕ್ಕೆ ಕಾರು ಜಖಂಗೊಂಡಿದ್ದು, ಕ್ರೇನ್‌ನ ಸಹಾಯದಿಂದ ಕಾರನ್ನು ಬೇರ್ಪಡಿಸಿ, ಮೃತದೇಹವನ್ನು ಗ್ರಾಮಸ್ಥರು ಹೊರತೆಗೆದಿದ್ದಾರೆ.
ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮೂವರು ಸಿರವಾರ ಕಡೆಗೆ ತೆರಳುತ್ತಿದ್ದರು. ಈ ವೇಳೆ ವಾಹನವೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕಾರಿಗೆ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ಕೂಡಲೇ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ರಾಯಚೂರು ವಿವಿ ಕುಲಪತಿ ಮುಖ್ಯ ಅತಿಥಿ!
ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

