ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ರಾಜ್ಯ ಸರ್ಕಾರ ಪ್ರತಿ ವರ್ಷ ನೀಡುವ ₹5,000 ಕೋಟಿ ಅನುದಾನವನ್ನು ಸಕಾಲದಲ್ಲಿ ಬಳಕೆ ಮಾಡಿಕೊಂಡು, ನಿಗದಿತ ಕಾಲಮಿತಿಯೊಳಗೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಮಂಡಳಿಯ ನೂತನ ಅಧ್ಯಕ್ಷ ಬಸನಗೌಡ ದದ್ದಲ್ ಹೇಳಿದರು.
ಶನಿವಾರ ಕಲಬುರಗಿಯಲ್ಲಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಚೇರಿಯಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಂಡಳಿಗೆ ಅನುದಾನದ ಕೊರತೆಯಿಲ್ಲ. ಆದರೆ, ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಅಗತ್ಯ ಸಿಬ್ಬಂದಿ ಕೊರತೆಯಿದೆ. ಹೀಗಾಗಿ ಸಿಬ್ಬಂದಿ ನೇಮಕಾತಿಗೆ ಕ್ರಮ ಕೈಗೊಂಡು ಮಂಡಳಿಯನ್ನು ಮತ್ತಷ್ಟು ಬಲಪಡಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಹೈನುಗಾರಿಕೆಗೆ ತಮ್ಮ ಅವಧಿಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು” ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗವು ಹಿಂದುಳಿದ ಪ್ರದೇಶವಾಗಿದ್ದು, ಉದ್ಯೋಗ, ಶಿಕ್ಷಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಗಮನ ಹರಿಸಲಾಗುವುದು. ಸಂವಿಧಾನದ 371ಜೆ ವಿಧಿಯಡಿ ರಚನೆಯಾದ ಮಂಡಳಿಯಿಂದ ಈಗಾಗಲೇ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹಿಂದಿನ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ ಅವರು ಅಕ್ಷರ ಆವಿಷ್ಕಾರ, ಆರೋಗ್ಯ ಆವಿಷ್ಕಾರದಂತಹ ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದರು.
ಪಕ್ಷ ಹಾಗೂ ಸರ್ಕಾರ ತಮ್ಮ ಮೇಲೆ ವಿಶ್ವಾಸವಿಟ್ಟು ಈ ಜವಾಬ್ದಾರಿ ನೀಡಿದ್ದು, ಪ್ರದೇಶದ ಸಚಿವರು, ಶಾಸಕರು ಹಾಗೂ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವುದಾಗಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರೂ ಆಗಿರುವ ಬಸನಗೌಡ ದದ್ದಲ್ ಹೇಳಿದರು.
ಕೇಂದ್ರದಿಂದಲೂ ₹5,000 ಕೋಟಿ ಮ್ಯಾಚಿಂಗ್ ಗ್ರ್ಯಾಂಟ್‌ಗೆ ಒತ್ತಾಯ
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ₹5,000 ಕೋಟಿ ಅನುದಾನ ನೀಡುತ್ತಿದೆ. ಇದೇ ಮಾದರಿಯಲ್ಲಿ ಸಂವಿಧಾನಕ್ಕೆ ವಿಶೇಷ ತಿದ್ದುಪಡಿ ತಂದು ರಚಿಸಲಾದ ಮಂಡಳಿಗೆ ಕೇಂದ್ರ ಸರ್ಕಾರವೂ ಪ್ರತಿ ವರ್ಷ ₹5,000 ಕೋಟಿ ಮ್ಯಾಚಿಂಗ್ ಗ್ರ್ಯಾಂಟ್ ನೀಡಬೇಕು. ಇದರಿಂದ ಈ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಅವರು ಒತ್ತಾಯಿಸಿದರು.
ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಸನಗೌಡ ದದ್ದಲ್ ಅವರಿಗೆ ರಾಜ್ಯದ ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಕೆಕೆಆರ್‌ಡಿಬಿ ಕಾರ್ಯದರ್ಶಿ ನಲಿನ್ ಅತುಲ್ ಸೇರಿದಂತೆ ಹಲವು ಗಣ್ಯರು ಹೂಗುಚ್ಛ ನೀಡಿ ಶುಭ ಕೋರಿದರು.
ಇದನ್ನೂ ಓದಿ :
ಈ ಸಂದರ್ಭದಲ್ಲಿ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮದ ಅಧ್ಯಕ್ಷೆ ಖನೀಜ್ ಫಾತಿಮಾ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ. ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕುಡಾ ಅಧ್ಯಕ್ಷ ಮಜಹರ್ ಆಲಂ ಖಾನ್, ಕರ್ನಾಟಕ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೆಮೂದ್ ಚಿಸ್ತಿ, ಕೆಕೆಆರ್‌ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ, ಕಲಬುರಗಿ ಜಿಲ್ಲಾಧಿಕಾರಿ ಇಕ್ರಂ ಶರೀಫ್, ಕೆಕೆಆರ್‌ಡಿಬಿ ಉಪ ಕಾರ್ಯದರ್ಶಿ ಅವಿನಾಶ ಶಿಂಧೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




